ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಿರ್ಮಾಣವಾಗಿರುವ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಭವನ ಅಕ್ಟೋಬರ್ 2, ಗಾಂಧಿ ಜಯಂತಿಯಂದು ಉದ್ಘಾಟನೆಯಾಗಲಿದೆ.
ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಆಗಮಿಸಲಿದ್ದಾರೆ.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಮತ್ತು ಈಶ್ವರ ಖಂಡ್ರೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳಕರ್, ಗಣೇಶ ಹುಕ್ಕೇರಿ ಸೇರಿದಂತೆ ಹಲವರು ಭಾಗವಹಿಸುವರು ಎಂದು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಶ್ರಮದ ಫಲವಾಗಿ ಕಾಂಗ್ರೆಸ್ ಭವನ ತಲೆಎತ್ತಿ ನಿಂತಿದೆ. ಲಕ್ಷ್ಮಿ ಹೆಬ್ಬಾಳಕರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ಜಾಗವನ್ನು ಮಂಜೂರು ಮಾಡಿಸಿಕೊಂಡು ಕಾಂಗ್ರೆಸ್ ಭವನದ ಯೋಜನೆ ರೂಪಿಸಿದ್ದರು. ನಂತರ ಲಕ್ಷ್ಮಿ ಹೆಬ್ಬಾಳಕರ್, ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕರು ಆರ್ಥಿಕ ನೆರವು ನೀಡುವ ಮೂಲಕ ಭವನ ತಲೆಎತ್ತಿ ನಿಂತಿದೆ.
ಶುಕ್ರವಾರ ಬೆಳಗ್ಗೆ 9 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಗಣ್ಯರು ಘಟಪ್ರಭಾಕ್ಕೆ ತೆರಳಿ ಅಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ