ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ನೇಮಕ ಮಾಡುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆಯನ್ನು ಅನುಕ್ರಮವಾಗಿ ರೂ.15,000 ಹಾಗೂ 16,000 ಪರಿಷ್ಕರಿಸಲು ಆರ್ಥಿಕ ಇಲಾಖೆಗೆ ಪುಸ್ತಾವನೆ ಸಲ್ಲಿಸಲಾಗಿತ್ತು.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ ಇಲಾಖೆಯು 2022ರ ಜೂ.13ರಂದು ಪರಿಷ್ಕರಿಸಲು ಸಹಮತಿ ನೀಡಿರುವುದರಿಂದ ಗೌರವ ಸಂಭಾವನೆಯನ್ನು ಪರಿಷ್ಕರಿಸಲು ಸಾಧ್ಯವಿಲ್ಲವೆಂದು 2024ರ ಮಾರ್ಚ್ 25ರಂದು ಹಿಂಬರಹ ನೀಡಿದೆ.
ಆದರೆ ಮತ್ತೊಮ್ಮೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಲಾಗುವುದು ಎಂದು ವಿವರಿಸಿದರು. ಅತಿಥಿ ಶಿಕ್ಷಕರು, ಉಪನ್ಯಾಸಕರ ಬದಲಾಗಿ ಅರೆಕಾಲಿಕ ಶಿಕ್ಷಕರ ನೇಮಕ ಮಾಡುವ ಪ್ರಸ್ತಾವನೆ ಇರುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ