*ರಾಜ್ಯದಲ್ಲಿ ಹೆಚ್ಚಿದ ಚಳಿಯ ಪ್ರಮಾಣ*: *ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ಶನಿವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದರೆ, ನವೆಂಬರ್ 29ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಶನಿವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದೆ.
ಇನ್ನು ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಹೀಗಾಗಿ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಮುನ್ಸೂಚನೆ ಇಲ್ಲ.
ಉತ್ತರ ಕರ್ನಾಟಕದಲ್ಲಿ ಮಳೆಯಿಲ್ಲ
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಈ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ.
ನವೆಂಬರ್ 29ರಿಂದ ರಾಜ್ಯಾದ್ಯಂತ ಒಣ ಹವೆ
ನವೆಂಬರ್ 29 ಮತ್ತು 30ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ರಾಜ್ಯದ ಹಲವು ಭಾಗಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ತಾಪಮಾನದಲ್ಲಿನ ಬದಲಾವಣೆಗಳ ಬಗ್ಗೆ ಸಾರ್ವಜನಿಕರು ಗಮನಹರಿಸುವುದು ಅಗತ್ಯವಾಗಿದೆ. ರೈತರು ಕೂಡ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಾಗ ಸ್ಥಳೀಯ ಹವಾಮಾನ ಮುನ್ಸೂಚನೆಯನ್ನು ಪರಿಗಣಿಸುವುದು ಸೂಕ್ತ.



