
ಪ್ರಗತಿವಾಹಿನಿ ಸುದ್ದಿ: ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆಗಾಗಿ ಮೆರವಣಿಗೆಯಲ್ಲಿ ತರುವಾಗ ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಮರಾಠ ಗಲ್ಲಿಯಿಂದ ಸಿಬಿಟಿ ಕಡೆಗೆ ಹೋಗುವ ರಸ್ತೆಯ ಬಳಿ ಮೇದಾರ್ ಓಣಿಯ ಗಣಪತಿ ಮತ್ತು ಕಲಾಲ್ ಓಣಿಯ ಗಣಪತಿ ಮೆರವಣಿಗೆಗಳು ಮುಖಾಮುಖಿಯಾದವು. ಈ ವೇಳೆ ಕಲಾಲ್ ಓಣಿಯ ಗಣಪತಿ ಡಿಜೆ ಮುಂದೆ ಕೆಲವು ಯುವಕರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು
ಮೆರವಣಿಗೆಯಲ್ಲಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೆಲ ಯುವಕರು ಅನುಚಿತವಾಗಿ ನಡೆದುಕೊಂಡಿದ್ದಾರೆ. ಇದನ್ನು ತಡೆಯಲು ಯತ್ನಿಸಿದ ಸ್ಥಳೀಯರೊಂದಿಗೆ ಕಿಡಿಗೇಡಿಗಳು ಗಲಾಟೆ ನಡೆಸಿದ್ದಾರೆ. ತಕ್ಷಣ ಎಚ್ಚೆತ್ತ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಹಿಳೆಯರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಹಬ್ಬದ ವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆಗಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮತ್ತು ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹಬ್ಬದ ಸಂಭ್ರಮದಲ್ಲಿದ್ದ ಸಾರ್ವಜನಿಕರ ನಡುವೆ ಈ ಕೃತ್ಯ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




