*ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕಲು ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ತಡೆದ ಪೊಲಿಸರು*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರು ಚುನಾವಣಾ ಆಯೋಗದ ಕಚೇರಿ ಮುತ್ತಿಗೆ ಹಾಕಲು ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆ ವೇಳೆ ತೀವ್ರ ಹೈಡ್ರಾಮಾ ನಡೆದಿದೆ.
ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸದರು ಸಂಸತ್ ಭವನದಿಂದ ಚುನವಣಾ ಆಯೋಗದ ಕಚೇರಿ ಇರುವ ನಿರ್ವಾಚನ ಸದನದ ಕಡೆಗೆ ಪಾದಯಾತ್ರೆ ಆರಂಭಿಸಿದ್ದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದ ನಿಯೋಗವು ಆಕಾಶವಾಣಿ ಭವನ ಮತ್ತು ನೀತಿ ಆಯೋಗದ ಗೇಟ್ ಬಳಿ ತಲುಪುತ್ತಿದ್ದಂತೆ, ಪೊಲೀಸರು ಬ್ಯಾರಿಕೇಡ್ ಹಾಕಿ ಅವರನ್ನು ತಡೆದರು. ಇದರಿಂದ ಆಕ್ರೋಶಗೊಂಡ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಚುನಾವಣಾ ಆಯೋಗದ ಹಿಂಭಾಗದ ಮೂಲಕ ಬಂದು ಮುತ್ತಿಗೆ ಹಾಕಲು ಕಾಂಗ್ರೆಸ್ ಹಾಗೂ ಎಸ್ ಪಿ ನಾಯಕರು ಯತ್ನಿಸಿದರು. ಅಲ್ಲಿಯೂ ಕೂಡ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಪ್ರತಿಭಟನಾಕಾರರನ್ನು ಬ್ಯಾರಿಕೆಡ್ ಮೂಲಕ ತಡೆಯಲಾಯಿತು. ಈ ವೇಳೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಇಂಡಿಯಾ ಮೈತ್ರಿಕೂಟದ ನಾಯಕರು ಚುನಾವಣಾ ಆಯೋಗದ ಹೊರ ಭಾಗದಲ್ಲಿ ಕುಳಿತು ಧರಣಿ ನಡೆಸಿದರು.
ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ನಿಯಮಗಳನ್ನು ಗಾಳಿಗೆ ತೂರಿದೆ. ಜ್ಞಾನೇಂದ್ರ ಕುಮಾರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಸುತ್ತಮುತ್ತ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




