
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,61,736 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,36,89,453ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 879 ಜನರು ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,71,058 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ವಿಶ್ವದ ಮೊದಲ ಕೊರೊನಾ ಲಸಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ರಷ್ಯಾ ತಯಾರಿಸಿರುವ ಸ್ಪುಟ್ನಿಕ್-ವಿ ವ್ಯಾಕ್ಸಿನ್ ನ್ನು ಭಾರತದಲ್ಲಿ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ.
ಹೈದರಾಬಾದ್ ನಲ್ಲಿರುವ ಡಾ.ರೆಡ್ಡಿಸ್ ಲ್ಯಾಬ್ಸ್ ನಿಂದ ಸ್ಪುಟ್ನಿಕ್ ವಿ ಲಸಿಕೆ ಪ್ರಯೋಗ ಮಾಡಲಾಗಿದ್ದು, ಭಾರತದಲ್ಲಿ ಲಭ್ಯವಾಗಲಿರುವ ಮೂರನೇ ಲಸಿಕೆ ಇದಾಗಲಿದೆ. ಸ್ಪುಟ್ನಿಕ್ ವಿ ಲಸಿಕೆಗೆ ಅನುಮತಿ ನೀಡಿದ ಬೆನ್ನಲ್ಲೇ ಲಸಿಕೆ ವೇಗ ಕೂಡ ಹೆಚ್ಚಲಿದೆ.




