*ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಜಗತ್ತಿಗೆ ಮಾದರಿ : ಪಾಲಿಕೆ ಆಯುಕ್ತ ಕಾರ್ತಿಕ್ ಎಂ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಪಾರ ಜನಸಂಖ್ಯೆಯೊಂದಿಗೆ ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಜಗತ್ತಿಗೆ ಮಾದರಿಯಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಕಾರ್ತಿಕ್ ಎಂ. ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ, ಶಾಲಾ ಶಿಕ್ಷಣ ಇಲಾಖೆ ಹಾಗೂ ನ್ಯಾಯಾಂಗ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ(ಸೆ.15) ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಹಾಗೂ ‘ಯುವ ಸಂಸತ್ತು’ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೌಲಿಕ ವಿಚಾರಗಳಿಂದ ರಚನೆಯಾಗಿರುವ ಭಾರತದ ಸಂವಿಧಾನವು ಸಾಮಾಜಿಕ ನ್ಯಾಯ, ಸಮಾನತೆ, ಹಕ್ಕುಗಳು ಮತ್ತು ಸ್ವಾತಂತ್ರ್ಯ ಸೇರಿದಂತೆ ಎಲ್ಲವನ್ನು, ಎಲ್ಲರನ್ನೂ ಒಳಗೊಂಡ ಪ್ರಜಾಪ್ರಭುತ್ವದ ಗಟ್ಟಿ ತಳಪಾಯವಾಗಿದೆ. ಈ ಹಿನ್ನೆಲೆಯಲ್ಲಿ ಯುವ ಸಂಸತ್ತು ಇಂದಿನ ಪೀಳಿಗೆಯಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ತಿಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಬಿ.ಜೆ. ಗಂಗಾಯಿ ಭಾರತೀಯ ಪ್ರಜೆಗಳು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವ ಅರಿತುಕೊಂಡಾಗ ಹಕ್ಕುಗಳನ್ನು ಅನುಭವಿಸಿ ಕರ್ತವ್ಯಗಳನ್ನು ಸಮರ್ಥವಾಗಿ ನಿಭಾಯಿಸಲು ಬದ್ಧರಾಗುತ್ತಾರೆ ಎಂದು ಹೇಳಿದರು.
ಉಪನ್ಯಾಸ ನೀಡಿದ ಮಹಾಂತೇಶ ನಗರದ ಬಿ.ಇಡಿ. ಕಾಲೇಜು ಪ್ರಾಚಾರ್ಯರಾದ ಡಾ. ನಿರ್ಮಲಾ ಬಟ್ಟಲ ಅವರು, ಪ್ರಜಾಪ್ರಭುತ್ವ ಪದ್ಧತಿಯಿಂದಲೇ ಪ್ರಜೆಗಳ ಸರ್ವತೋಮುಖ ಅಭಿವೃದ್ಧಿ ಆಗಲು ಸಾಧ್ಯ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಬಿ. ಹೊಸಮನಿ ವಂದಿಸಿದರು. ಸಮಾರಂಭದ ಆರಂಭದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಲಾಯಿತು ಹಾಗೂ ಸಂವಿಧಾನ ಪೀಠಿಕೆ ವಾಚನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ.ಎ.ಡಿ. ರವಿ ಬಂಗಾರಪ್ಪನವರ, ಪಿ.ಯು.ಡಿ.ಡಿ. ಮಹಾದೇವ ಕಾಂಬಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಮಾಜ ಸೇವಕ ಮಲ್ಲೇಶ ಚೌಗಲೆ, ಕಿತ್ತೂರು ರಾಣಿ ಚೆನ್ನಮ್ಮ ವಿವಿ ಪ್ರಾಧ್ಯಾಪಕ ಡಾ. ಪ್ರಕಾಶ ಕಟ್ಟಿಮನಿ, ನಿವೃತ್ತ ಅಭಿಯಂತರ ಡಿ.ವೈ. ಪವಾರ್ ಇತರರು ಉಪಸ್ಥಿತರಿದ್ದರು.


