*ಇನ್ ಫ್ಲೂಯೆಂಜಾ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇನ್ ಫ್ಲೂಯೆಂಜಾ, ವೈರಲ್ ನ್ಯೂಮೋನಿಯಾ, ಡೆಂಗ್ಯೂ, ಜಾಂಡೀಸ್, ಐಎಲ್ಐ-ಸಾರಿ ಸೇರಿದಂತೆ ಯಾವುದೇ ರೀತಿಯ ಪ್ರಕರಣಗಳು ಕಂಡುಬಂದರೆ ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣವೇ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ನ.27) ನಡೆದ ಸಮಗ್ರ ರೋಗಗಳ ಕಣ್ಗಾವಲು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವೈರಲ್ ನ್ಯೂಮೋನಿಯಾ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಚಿಕಿತ್ಸೆ ಒದಗಿಸಲು ಆರೋಗ್ಯ ಇಲಾಖೆಯು ಸನ್ನದ್ಧವಾಗಿರಬೇಕು.
ಬಿಮ್ಸ್ ಸೇರಿದಂತೆ ಇತರೆ ಆರ್.ಟಿ.ಪಿ.ಸಿ.ಆರ್. ಕೇಂದ್ರಗಳು ನಿರಂತರವಾಗಿ ಕಾರ್ಯನಿರ್ವಹಿಸಬೇಕು.
ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಆಕ್ಸಿಜನ್, ಔಷಧಿ ಸಾಮಗ್ರಿಗಳು, ಪ್ರತ್ಯೇಕ ಕೊಠಡಿಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಇನ್ ಫ್ಲೂಯೆಂಜಾ, ವೈರಲ್ ನ್ಯೂಮೋನಿಯಾ, ಜಾಂಡೀಸ್, ಡೆಂಗ್ಯೂ, ಸೇರಿದಂತೆ ಯಾವುದೇ ರೋಗಗಳು ಹರಡದಂತೆ ಸರ್ವೇಕ್ಷಣಾಧಿಕಾರಿಗಳು ಜಿಲ್ಲೆಯ ಎಲ್ಲ ಕಡೆ ತೀವ್ರ ನಿಗಾವಹಿಸಬೇಕು.
ವೈದ್ಯರು ಸೇರಿದಂತೆ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಡಿಎಚ್ಓ ಅವರಿಗೆ ತಿಳಿಸಿದರು.
ಬೆಳಗಾವಿಯಲ್ಲಿ ವಿಧಾನಮಂಡಳ ಚಳಿಗಾಲ ಅಧಿವೇಶನ ಕೂಡ ಡಿಸೆಂಬರ್ ನಲ್ಲಿ ನಡೆಯಲಿರುವುದರಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿ ಸೇರಿದಂತೆ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಯ ಆರೋಗ್ಯ ಕೂಡ ಪರೀಕ್ಷಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ ಅವರು, ಚೈನಾದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ನ್ಯೂಮೋನಿಯಾ ಬಗೆಯ ಪ್ರಕರಣಗಳು ಕಂಡುಬಂದಲ್ಲಿ ಅವುಗಳ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿರುತ್ತದೆ ಎಂದು ಸಭೆಯಲ್ಲಿ ವಿವರಿಸಿದರು.
ಖಾಸಗಿ ಆಸ್ಪತ್ರೆಗಳು ಹೆಚ್ಚು ಶುಲ್ಕವನ್ನು ಪಡೆದುಕೊಂಡಿರುವ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಆಯುಷ್ಮಾನ್ ಭಾರತ್ ಯೋಜನೆಯ ಅನುಸಾರ ಪ್ರಕರಣಗಳನ್ನು ವಿಲೇವಾರಿ ಮಾಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಸಂಜಯ ದೊಡ್ಡಮನಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಗೀತಾ ಕಾಂಬಳೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಾಂದನಿ ದೇವಡಿ, ಚಿಕ್ಕೋಡಿಯ ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಗಡೇದ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ