*ಜೈನಮುನಿ ಹತ್ಯೆ ಪ್ರಕರಣ; CBI ತನಿಖೆ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಜೈನಮುನಿ ಹತ್ಯೆ ಪ್ರಕರಣಕ್ಕೆ ರಾಜಕೀಯ ಬಣ್ಣಬಳಿಯಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ವರೂರಿನಲ್ಲಿ ಗುಣಧರನಂದಿ ಶ್ರೀಗಳು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದು, ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ ಶ್ರೀಗಳೊಂದಿಗೆ ಮಾತನಾಡಿದ ಗೃಹ ಸಚಿವರು ಸತ್ಯಾಗ್ರಹ ವಾಪಸ್ ಪಡೆಯುವಂತೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಶ್ರೀಗಳು ಉಪವಾಸಸತ್ಯಾಗ್ರಹ ಹಿಂಪಡೆಯಲು ನಿರ್ಧರಿಸಿದ್ದಾರೆ.
ಈ ವೇಳೆ ಮಾತನಾಡಿದ ಸಚಿವ ಜಿ.ಪರಮೇಶ್ವರ್, ಜೈನಮುನಿ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಡಿವೈ ಎಸ್ ಪಿ ನೇತೃತ್ವದಲ್ಲಿ ತನಿಖೆ ನಡೆದಿದೆ. ತನಿಖೆಯಿಂದ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ. ಪ್ರಕರಣವನ್ನು ಸಿಬಿಐಗೆ ವಹಿಸುವ ಅನಿವಾರ್ಯತೆ ಇಲ್ಲ ಎಂದು ತಿಳಿಸಿದರು.
ಆರೋಪಿಗಳನ್ನು ರಾಜ್ಯ ಸರ್ಕಾರ ರಕ್ಷಿಸುತ್ತಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಜನಪ್ರತಿನಿಧಿಗಳು ಇಂತಹ ಮಾತನಾಡಬಾರದು. ಜೈನಮುನಿ ಹತ್ಯೆ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಪ್ರಕರಣದ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ