Latest

*ಜಂತರ್ ಮಂತರ್ ಇನ್ಮುಂದೆ ಪ್ರತಿಭಟನಾ ತಾಣವಲ್ಲ*: *ದೆಹಲಿ ಪೊಲೀಸರ ಮಹತ್ವದ ಆದೇಶ!*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ದೆಹಲಿ ಪೊಲೀಸರು ಕೈಬಿಟ್ಟಿದ್ದಾರೆ. ಇನ್ಮುಂದೆ ಇಲ್ಲಿ ಅಧಿಕೃತ ಧರಣಿ ಮತ್ತು ಪ್ರತಿಭಟನೆಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ. ಕೇಂದ್ರ ಗೃಹ ಸಚಿವಾಲಯದ ಸಮಿತಿಯ ಶಿಫಾರಸಿನ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರತಿಭಟನೆಗಳಿಗೆ ಪರ್ಯಾಯವಾಗಿ ಮೂರು ಸ್ಥಳಗಳನ್ನು ಗುರುತಿಸಲಾಗಿದೆ.

ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಾಗರಿಕರು ತಮ್ಮ ಪ್ರತಿಭಟನೆ ಮತ್ತು ಪ್ರದರ್ಶನಗಳನ್ನು ಆಯೋಜಿಸುವ ಹಕ್ಕನ್ನು ಚಲಾಯಿಸಲು ಸೂಕ್ತ ಪರ್ಯಾಯ ಸ್ಥಳಗಳನ್ನು ಗುರುತಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವಾಲಯ ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಇದಕ್ಕೆ ಬದಲಿಯಾಗಿ ದೆಹಲಿಯಲ್ಲಿ ರಾಮಲೀಲಾ ಮೈದಾನ, ಬುರಾರಿ ಮೈದಾನ ಮತ್ತು ಪೂರ್ವ ದೆಹಲಿಯ ಸಿಬಿಡಿ ಮೈದಾನವನ್ನು ಪ್ರತಿಭಟನೆ ಹಾಗೂ ಧರಣಿಗಳಿಗಾಗಿ ನಿಗದಿಪಡಿಸಲಾಗಿದೆ. ಈ ಮೂರು ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ಆಯೋಜಿಸುವುದಕ್ಕೆ ಸಂಬಂಧಿಸಿದ ಪರಿಷ್ಕೃತ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ಮತ್ತು ನಿಯಮಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು ಎಂದು ಪೊಲೀಸ್ ಆದೇಶದಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ರಾಜಕೀಯ ಪ್ರತಿಭಟನೆಗಳು ತೀವ್ರಗೊಂಡಿರುವ ನಡುವೆಯೇ ಈ ನಿರ್ಧಾರ ಹೊರಬಿದ್ದಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ವಿರೋಧ ಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ.

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳಾದ ಎಸ್‌ಎಫ್‌ಐ ಮತ್ತು ಐಎಸ್‌ಎ ಸೇರಿದಂತೆ ವಿವಿಧ ಸಂಘಟನೆಗಳು ಜಂತರ್ ಮಂತರ್ ಸುತ್ತಮುತ್ತ ಪ್ರತಿಭಟನೆಗಳನ್ನು ಆಯೋಜಿಸಿದ್ದವು. ಈ ಸಂದರ್ಭದಲ್ಲಿ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಭದ್ರತೆ ಹಾಗೂ ಸಾರ್ವಜನಿಕ ಸಂಚಾರ ನಿರ್ವಹಣೆಯ ಅಗತ್ಯವನ್ನು ಈ ನಿರ್ಧಾರಕ್ಕೆ ಕಾರಣವಾಗಿ ಪೊಲೀಸ್ ಮೂಲಗಳು ಉಲ್ಲೇಖಿಸಿವೆ.

ದೆಹಲಿ ಪೊಲೀಸರ ಈ ಆದೇಶಕ್ಕೆ ರಾಜಕೀಯ ವಲಯ ಹಾಗೂ ನಾಗರಿಕ ಹಕ್ಕುಗಳ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿಗೆ ನಿರ್ಬಂಧ ವಿಧಿಸಿರುವ ನಿರ್ಧಾರವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಕೂಡ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ನ್ಯಾಯಾಲಯ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button