ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ನಿಪ್ಪಾಣಿ ಮತ್ತು ಚಿಕ್ಕೋಡಿ ತಾಲ್ಲೂಕಿನ ನದಿತೀರದ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರ ಉಪಸ್ಥಿತಿಯಲ್ಲಿ ನಿಪ್ಪಾಣಿ ತಾಲ್ಲೂಕಿನ ಭಿವಸಿ, ಸಿದ್ನಾಳ ಹಾಗೂ ಹುನ್ನರಗಿ ಗ್ರಾಮಗಳಲ್ಲಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ಮಳೆಯ ಪ್ರಮಾಣ ಜಾಸ್ತಿಯಾಗಿರುವುದರಿಂದ ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ಕಳೆದ ವರ್ಷ ಎದುರಾದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಜನರ ರಕ್ಷಣೆಗೆ ಬೋಟ್ ಗಳು, ತಕ್ಷಣವೇ ಪರಿಹಾರ ಕೇಂದ್ರ ಆರಂಭಿಸಿ ಜನರಿಗೆ ವಸತಿ ಮತ್ತು ಊಟೋಪಹಾರದ ವ್ಯವಸ್ಥೆ ಕಲ್ಪಿಸಲು ಸಜ್ಜಾಗಿರುವಂತೆ ಜಿಲ್ಲಾಧಿಕಾರಿ ಹಿರೇಮಠ ಅವರು, ತಹಶೀಲ್ದಾರ ಮತ್ತು ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಚಿವರಿಗೆ ಮಾಹಿತಿಯನ್ನು ನೀಡಿದರು.
ನಂತರ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರೊಂದಿಗೆ ಚಿಕ್ಕೋಡಿ ಭಾಗದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಂಡರು.
ಮಾಂಜರಿ ಸೇತುವೆಯ ಬಳಿ ಕೃಷ್ಣಾ ನದಿಯ ಹರಿವು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಯಡೂರ, ಯಡೂರವಾಡಿಯ ಪಿರಾಜೆ ತೋಟ, ಚಂದೂರ, ಚಂದೂರ ಟೇಕ್ ಗ್ರಾಮಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಇದೇ ವೇಳೆ ಯಡೂರನಲ್ಲಿ ಎನ್.ಡಿ.ಆರ್.ಎಫ್. ತಂಡದ ಜತೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ಹಿರೇಮಠ ಅವರು, ಯಾವುದೇ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಎದುರಾದರೂ ಕೂಡ ಸಮರ್ಪಕ ನಿರ್ವಹಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಮತ್ತ ಅಗತ್ಯ ಸಲಕರಣೆಗಳ ಜತೆಗೆ ಸಜ್ಜಾಗಿರುವಂತೆ ತಿಳಿಸಿದರು.
ಇದಾದ ಬಳಿಕ ಅಂಕಲಿ ಪರಿಹಾರ ಕೇಂದ್ರಕ್ಕೆ ತೆರಳಿ ಅಲ್ಲಿ ಕಲ್ಪಿಸಲಾಗಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಹಾಗೂ ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ