Karnataka NewsLatest

*ಮೋಹ‌ನ ಹೆಗಡೆಗೆ ಕೆ. ಶಾಮರಾವ ದತ್ತಿನಿಧಿ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕೊಡಮಾಡುವ 2024ನೇ ಸಾಲಿನ ಕೆ.ಶಾಮರಾವ್ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತರು, ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ಸಂಪಾದಕರಾದ ಮೋಹನ ಹೆಗಡೆ ಭಾಜನರಾಗಿದ್ದಾರೆ.

ಶಿರಸಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ಸಂಘದ ಅಧ್ಯಕ್ಷ ಜಿ. ಸುಬ್ರಾಯ ಭಟ್ ಬಕ್ಕಳ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಮೋಹನ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಕಳೆದ 4 ದಶಕಗಳಿಂದ ಸಕ್ರಿಯ ಪತ್ರಕರ್ತರಾಗಿರುವ ಹೆಗಡೆ ಅವರು ಪ್ರಸ್ತುತ ಹುಬ್ಬಳ್ಳಿಯ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಮನ ಮನೆಯವರಾದ ಅವರು ಸುದೀರ್ಘ ಅವಧಿಗೆ ಕಾರವಾರದಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. 1985 ರಿಂದ 2011ರ ವರೆಗೆ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಉಪ ಸಂಪಾದಕ, ವರದಿಗಾರ, ಮುಖ್ಯ ವರದಿಗಾರ, ಸುದ್ದಿ ಸಂಪಾದಕ ಹಾಗೂ ಸ್ಥಾನಿಕ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Home add -Advt

2011 ರಿಂದ 2020ರವರೆಗೆ ವಿಜಯವಾಣಿ ದಿನಪತ್ರಿಕೆಯಲ್ಲಿ ಸ್ಥಾನಿಕ ಸಂಪಾದಕರಾಗಿದ್ದರು. 2021 ರಿಂದ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ‘ಜನಾಶಯ’ ಅಂಕಣ ಅಪಾರ ಜನಪ್ರಿಯತೆ ಗಳಿಸುವುದರ ಜೊತೆಗೆ ಉತ್ತರ ಕನ್ನಡ ಜಿಲ್ಲೆಯ ಹಲವು ಸಮಸ್ಯೆಗಳನ್ನು ಅಧ್ಯಯನ ನಡೆಸಿ ನಾಡಿಗೆ ತಿಳಿಸಿ ಪರಿಹಾರ ಕೊಡಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ.

ನಾಲ್ಕು ದಶಕಗಳ ಪತ್ರಿಕಾ ವೃತ್ತಿಯಲ್ಲಿ ಮೋಹನ ಹೆಗಡೆ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಧೀಮಂತ ಪತ್ರಕರ್ತ ಪ್ರಶಸ್ತಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ರಾಜ್ಯೋತ್ಸವ ಪ್ರಶಸ್ತಿ, ಸ್ಪಂದನಾ ಸಾಮಾಜಿಕ ಸಂಸ್ಥೆಯಿಂದ ಸ್ಪಂದನಾ ಪುರಸ್ಕಾರ, ಸಂಗೊಳ್ಳಿ ರಾಯಣ್ಣ ಮಾಧ್ಯಮ ಪ್ರಶಸ್ತಿ, ಡಾ. ಜಿ.ಆರ್. ಪಾಂಡೇಶ್ವರ ಪ್ರಶಸ್ತಿ, ಕೆಯುಡಬ್ಲ್ಯುಜೆಯಿಂದ ಕೊಡಮಾಡುವ ಎಸ್.ವಿ. ಜಯಶೀಲರಾವ್ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳು ಸಂದಿವೆ.

ಡಿಸೆಂಬರ್‌ನಲ್ಲಿ ಆಯೋಜಿಸಲಾಗಿರುವ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಮೋಹನ ಹೆಗಡೆ ಅವರಿಗೆ ಕೆ. ಶಾಮರಾವ್ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಹೊನ್ನೆಕೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button