*ನ್ಯಾಯಾಧೀಶ ಮಂಜುನಾಥ ನಾಯಕ ಅವರಿಂದ ರಸ್ತೆ ಸುರಕ್ಷತಾ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶನಿವಾರ (ಜ.31) ನಡೆದ ’37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ 2026’ರ ಜಾಥಾ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ ನಾಯಕ ಅವರು ಚಾಲನೆ ನೀಡಿದರು.
ಜಾಗೃತಿ ಜಾಥಾ ಹೊಸ ನ್ಯಾಯಾಲಯ ಆವರಣದಿಂದ ಚನ್ನಮ್ಮ ವೃತ್ತದ ಮಾರ್ಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ರಸ್ತೆ ಸಾರಿಗೆ ಇಲಾಖೆ ಕಚೇರಿಗೆ ತಲುಪಿತು. ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಲೈಟ್ ಧರಿಸಿ, ಪ್ರಾಣ ಉಳಿಸಿ, ಸೀಟ್ ಬೆಲ್ಟ್ ಕಡ್ಡಾಯ, ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ಸಮಯಕ್ಕಿಂತ ಜೀವ ಮುಖ್ಯ, ಮೊಬೈಲ್ ಬಳಸಬೇಡಿ ಎಂಬ ವಿವಿಧ ಜಾಗೃತಿ ಫಲಕಗಳನ್ನು ಪ್ರದರ್ಶಿಸಿದರು.
ಬಳಿಕ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ, ಮಾನವ ಜೀವ ಅತ್ಯಂತ ಅಮೂಲ್ಯವಾದದ್ದು, ಅಪಘಾತದಿಂದಾಗುವ ಜೀವ ಹಾನಿ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮಗಳು ಹಾಗೂ ರಸ್ತೆ ಸುರಕ್ಷತಾ ನಿಯಮಗಳ ತಿಳಿವಳಿಕೆ ಅತ್ಯಗತ್ಯವಾಗಿದೆ. ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಅವರು ತಿಳಿಸಿದರು.
ರಸ್ತೆ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಪ್ರತಿನಿತ್ಯ ಅಪಘಾತ ಪ್ರಕರಣಗಳು ಕಂಡು ಬರುತ್ತಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಜಾಗೃತಿ ಹೊಂದುವ ಅಗತ್ಯವಿದೆ ಎಂದರು.
ಪ್ರಸ್ತುತ ದಿನಮಾನಗಳಲ್ಲಿ ಯುವಕರು ಅತ್ಯಂತ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿ ಸಂಚಾರ ನಿಯಮ ಉಲ್ಲಂಘಿಸುತ್ತಿದ್ದಾರೆ. ನಿಯಮಗಳು ಇರುವುದು ನಮ್ಮ ಒಳ್ಳೆಯದಕ್ಕಾಗಿ ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲಿಸಬೇಕು.
ವಾಹನ ಚಾಲಕರು ಹೆಲೈಟ್ ಹಾಗೂ ಸೀಟ್ ಬೆಲ್ಟ್ ಕಡ್ಡಾಯವಾಗಿ ಬಳಸಬೇಕು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು ಹಾಗೂ ವೇಗ ನಿಯಂತ್ರಣಕ್ಕೆ ವಿಶೇಷ ಗಮನ ನೀಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ತಿಳಿಸಿದರು.
ರಸ್ತೆ ಅಪಘಾತಗಳಿಂದ ಅನೇಕ ಅಮೂಲ್ಯ ಜೀವಗಳು ಹಾನಿಯಾಗುತ್ತಿವೆ. ನಿಯಮ ಪಾಲನೆ ಮತ್ತು ಜವಾಬ್ದಾರಿಯುತ ಚಾಲನೆಯಿಂದ ಅಪಘಾತಗಳನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ರಸ್ತೆ ಸುರಕ್ಷಿತ ನಿಯಮ ಪಾಲನೆ-ಸುರಕ್ಷಿತ ಜೀವನ ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕೆಂದು ಬೆಳಗಾವಿ ವಿಭಾಗದ ರಸ್ತೆ ಸಾರಿಗೆ ಜಂಟಿ ಆಯುಕ್ತರಾದ ಸಿದ್ದಪ್ಪ ಕಲ್ಲೇರ ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಎಂ. ಕಾರ್ತಿಕ, ಅಪರಾದ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಎನ್.ನಿರಂಜನ್ ಅರಸ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗೇಶ ಮುಂಡಾಸ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಎಂ ಕಾಂಬಳೆ, ಡಿಡಿಪಿಐ ಲೀಲಾವತಿ ಹಿರೇಮಠ, ಕ್ಷೇತ ಶಿಕ್ಷಣಾಧಿಕಾರಿ ರವಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.



