ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಆರಂಭವಾಗಿದ್ದು, ಸರ್ಕಾರ ಪತನವಾಗುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಜ್ಯೋತಿರಾದಿತ್ಯ ಸಿಂಧಿಯಾ, ಸತತ 18 ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದ ತೃಪ್ತಿ ಇದೆ. ಪಕ್ಷ ನೀಡಿದ ಎಲ್ಲ ಜವಾಬ್ದಾರಿಗಳನ್ನೂ ಸಮರ್ಥವಾಗಿ ನಿಭಾಯಿಸಿರುವುದಾಗಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಈಗಾಗಲೇ ಜ್ಯೋತಿರಾದಿತ್ಯ ಸಿಂಧಿಯಾ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿಯನ್ನು ಇಂದು ಸಂಜೆಯೇ ಸೇರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಒಂದೆಡೆ ಜ್ಯೋತಿರಾಧಿತ್ಯ ಸಿಂಧಿಯಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರೆ, ಕಾಂಗ್ರೆಸ್ ಸಿಂಧಿಯಾರನ್ನು ಉಚ್ಛಾಟಿಸಿದೆ. ಪಕ್ಷವಿರೋಧಿ ಕೆಲಸದಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರ ಸೂಚನೆ ಮೇಲೆ ಉಚ್ಛಾಟಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪತ್ರ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ