Latest

1,300 ಕೋಟಿ ರೂ.ಕಾಮಗಾರಿಗಳಿಗೆ ಸಿಎಂ ಚಾಲನೆ

ಪ್ರಗತಿವಾಹಿನಿ ಸುದ್ದಿ; ಕಲಬರುಗಿ: 73ನೇ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಎಸ್ ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸಿಎಂ ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದರು. ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು.

2013-14 ರಿಂದ 219-20ರ ವರೆಗೆ ಕೆಕೆಆರ್ ಡಿಬಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ವಿಶೇಷ ಕೈಪಿಡಿಯನ್ನ ಸಿಎಂ ಬಿಡುಗಡೆ ಮಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದರು.

ಈ ವೇಳೆ ಮಾತನಾಡಿದ ಅವರು, ಮಳೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆಂದು ಅಂದುಕೊಂಡಿರಲಿಲ್ಲ. ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿ ವಿಭಾಗದಲ್ಲಿ ಸ್ವಾತಂತ್ರ್ಯ ಸಂಭ್ರಮ ಕಳೆಗಟ್ಟಿದೆ. ಬ್ರಿಟಿಷರಿಂದ ದೇಶಕ್ಕೆ ಆಗಸ್ಟ್ 15 ರಂದು ಸ್ವಾತಂತ್ರ್ಯ ದೊರೆತಿದ್ದರೆ ಅಂದಿನ ಹೈದ್ರಾಬಾದ್ ಕರ್ನಾಟಕ, ಈಗಿನ ಕಲ್ಯಾಣ ಕರ್ನಾಟಕಕ್ಕೆ ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತದೆ. ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button