
ಪ್ರಗತಿವಾಹಿನಿ ಸುದ್ದಿ: ಲಿಂಗಾಯಿತ ಒಕ್ಕೂಟದ ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಕೊಲ್ಲಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಈಗ ಅವರ ಮೇಲಿನ ನಿರ್ಬಂಧ ತೆರವು ಮಾಡಿ ಹೈಕೋರ್ಟ್ ಆದೇಶ ನೀಡಿದೆ.
ಧಾರವಾಡ ಜಿಲ್ಲೆಗೆ ನಿರ್ಬಧ ಹೇರಿರುವ ವಿಚಾರವಾಗಿ ಶ್ರೀಗಳು ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅದರ ತೀರ್ಪು ಪ್ರಕಟವಾಗಿದ್ದು, ಧಾರವಾಡ ಹೈಕೋರ್ಟ್ ಪೀಠ ಕನ್ನೇರಿ ಮಠದ ಶ್ರೀಗಳಿಗೆ ಹಾಕಿದ್ದ ನಿರ್ಬಂಧ ತೆರವು ಮಾಡಿ ಆದೇಶವನ್ನ ಹೊರಡಿಸಿದೆ.
ಕೆಲ ಸಮಯದ ಹಿಂದೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದ ಸಮಾರಂಭದಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿ, ದೇವಾಲಯಕ್ಕೆ ಹೋಗಬೇಡಿ ಎಂದು ಪ್ರಚಾರ ಮಾಡಲಾಗ್ತಿದೆ. ಮುಖ್ಯಮಂತ್ರಿಗಳ ಕೃಪಾಪೋಷಿತ ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ಕಲಾವಿದರು ಸೇರಿ ಬಸವ ಸಂಸ್ಕೃತಿ ಅಭಿಯಾನ ಎನ್ನುವ ನಾಟಕವನ್ನ ರಾಜ್ಯಾದ್ಯಂತ ಮಾಡುತ್ತಿದ್ದಾರೆ. ಗುಡಿಯಲ್ಲಿ ದೇವರಿಲ್ಲ. ಮನೆಯಲ್ಲಿನ ದೇವರನ್ನು ಹೊಳೆಗೆ ಹಾಕಿ ಎನ್ನುತ್ತಿದ್ದಾರೆ. ಇವರಿಗೆ ನಾನೇ ಬುದ್ಧಿ ಹೇಳಬೇಕು ಎಂದು ಕೆಲ ಅಸಂವಿಧಾನಿಕ ಪದ ಬಳಸಿ ಆಕ್ರೋಶಕ್ಕೆ ಗುರಿಯಾಗಿದ್ದರು.




