Film & EntertainmentKannada NewsKarnataka NewsLatest

*ಸೋನು ನಿಗಮ್ ಕಾರ್ಯಕ್ರಮಕ್ಕೆ ಕರವೇ ವಿರೋಧ*: *ಅನುಮತಿ ರದ್ದತಿಗೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಕನ್ನಡಿಗರ ಭಾಷಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಕ್ಕೆ ಕಾರಣವಾಗಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮತ್ತೆ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 24ರಂದು ನಿಗದಿಯಾಗಿರುವ ಸಂಗೀತ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಕರವೇ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ. ಈಗಾಗಲೇ ಅನುಮತಿ ನೀಡಿದ್ದರೆ ತಕ್ಷಣ ರದ್ದುಗೊಳಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದೆ.

ಟಿ.ಎ. ನಾರಾಯಣಗೌಡ ನೇತೃತ್ವದ ಕರವೇ ಪದಾಧಿಕಾರಿಗಳು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. 2025ರ ಏಪ್ರಿಲ್‌ನಲ್ಲಿ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದ ವೇಳೆ ಸೋನು ನಿಗಮ್ ಕನ್ನಡಿಗರ ಭಾಷಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ಮಾತನಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹೇಳಿಕೆ ಕನ್ನಡಿಗರ ಸ್ವಾಭಿಮಾನ ಮತ್ತು ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕರವೇ ಆಕ್ಷೇಪ ವ್ಯಕ್ತಪಡಿಸಿದೆ.

ಈ ವಿವಾದಕ್ಕೆ ಸಂಬಂಧಿಸಿದಂತೆ 2025ರ ಮೇ 2ರಂದು ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿರುದ್ಧ ದೂರು ದಾಖಲಾಗಿತ್ತು. ಹಳೆಯ ದೂರಿನ ಪ್ರಸ್ತುತ ಸ್ಥಿತಿಯನ್ನು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರವೇ ಮನವಿಯಲ್ಲಿ ತಿಳಿಸಿದೆ.

ಬೆಂಗಳೂರಿನ ಥಣಿಸಂದ್ರದಲ್ಲಿರುವ ಭಾರತೀಯ ಮಾಲ್ ಆಫ್ ಬೆಂಗಳೂರು ಆವರಣದಲ್ಲಿ ಅಕ್ಟೋಬರ್ 24ರಂದು ಸೋನು ನಿಗಮ್ ಅವರ ‘ದಿ ರೆವಲ್ಯೂಷನ್ ಇಂಡಿಯಾ ಟೂರ್’ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಗಾಯಕನಿಗೆ ನಗರದಲ್ಲಿ ಕಾರ್ಯಕ್ರಮ ನಡೆಸಲು ಅವಕಾಶ ನೀಡಬಾರದು ಎಂಬುದು ಕರವೇ ನಿಲುವಾಗಿದೆ.

ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರವೇ ಮನವಿ ಮಾಡಿದೆ. ಕಾರ್ಯಕ್ರಮಕ್ಕೆ ಅನುಮತಿ ಮುಂದುವರಿಸಿದರೆ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುವುದಾಗಿ ಸಂಘಟನೆ ಎಚ್ಚರಿಕೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button