Kannada NewsKarnataka NewsLatest

*ತೀವ್ರಗೊಂಡ ಕಾವೇರಿ ಹೋರಾಟ; ವಿಧಾನಸೌಧಕ್ಕೆ ಮುತ್ತಿಗೆ ಯತ್ನ; ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವಿಧನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿದರು.

ವಿಧಾನಸೌಧ ಮುತ್ತಿಗೆ ಹಾಕಲು ಮುಂದಾದ ಕರವೇಕಾರ್ಯಕರ್ತರನ್ನು ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಪೊಲೀಸರು ತಡೆದಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಈ ವೇಳೆ ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣಗೌಡ, ಸುಪ್ರೀಂ ಕೋರ್ಟ್ ಆದೇಶ ರಾಜ್ಯದ ರೈತರ ಮರಣಶಾಸನವಾಗಿದೆ. ತಕ್ಷಣ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ತಮಿಳುನಾಡಿಗೆ ಹನಿ ನೀರು ಬಿಡಬಾರದು. ರಾಜ್ಯದಲ್ಲಿ ಮಲೆ ಇಲ್ಲದೇ ನೀರಿನ ಅಭಾವ ಸೃಷ್ಟಿಯಾಗಿದೆ. ರೈತರ ಬೆಳೆಗಳಿಗೆ ನೀರಿಲ್ಲ. ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಕೆ.ಆರ್.ಎಸ್, ಕಬಿನಿಯಲ್ಲಿ ನೀರಿಲ್ಲ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು ಎಂದು ಎಚ್ಚರಿಸಿದರು. ತಮಿಳುನಾಡಿಗೆ ಕಾವೇರಿ ನೀರು ನಿಲ್ಲಿಸುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಈ ವೇಳೆ ವಿಧಾನಸೌಧದತ್ತ ಮುತ್ತಿಗೆ ಹಕಲು ಮುಂದಾದ ನಾರಾಯಣಗೌಡ ಸೇರಿದಂತೆ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಸ್ ಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button