ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೂ ಸುಧಾರಣೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘ ಕರೆ ನೀಡಿರುವ ಕರ್ನಾಟಕ ಬಂದ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದಾರೆ.
ರೈತರ ಪ್ರತಿಭಟನೆಗೆ 33ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ಕಿಚ್ಚು ಹೆಚ್ಚಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮೆಜೆಸ್ಟಿಕ್ ರೈಲು ನಿಲ್ದಾಣ, ಮೆಟ್ರೋ ನಿಲ್ದಾಣಗಳಿಗೆ ಮುತ್ತಿಗೆ ಹಾಕಲು ಮುಂದಾದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಮೂರು ತಂಡಗಳಲ್ಲಿ ಮೂರು ಸ್ಥಳಗಳಿಗೆ ಸರ್ಕಾರದ ವಿರುದ್ಧ ಘೋಷಣೆಬ್ ಕೂಗುತ್ತಾ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಹೋರಾಟಗಾರರ ನಡುವೆ ವಾಗ್ವಾದ ನಡೆದಿದೆ. ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ರಾಜಧಾನಿಯ ಬಹುತೇಕ ಕಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಮೌರ್ಯ ವೃತ್ತ, ಕೆ.ಆರ್ ಮಾರುಕಟ್ಟೆ, ಮೆಜೆಸ್ಟಿಕ್, ಲಗ್ಗೆರೆ ಸೇರಿದಂತೆ ಹಲವೆಡೆಗಳಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ರಸ್ತೆಗಳಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ