ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಖಾಸಗಿ ಕೆಲಸಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕೆಂಬ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಸುಮಾರು 500ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹಲವು ಕನ್ನಡ ಪರ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿದ್ದರೂ ಸಹ ನಾರಾಯಣ ಗೌಡ ಹಾಗೂ ಪ್ರವೀಣ್ ಶೆಟ್ಟಿ ನೇತೃತ್ವದ ಕರವೇ ಬಣ ಹಾಗೂ ಹಿರಿಯ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಬಂದ್ಗೆ ಬೆಂಬಲ ಸೂಚಿಸಿಲ್ಲ. ಸರ್ಕಾರಿ ಹಾಗೂ ಖಾಸಗಿ ಸಾರಿಗೆ ಸಂಸ್ಥೆಗಳು ಬಂದ್ಗೆ ನೈತಿಕ ಬೆಂಬಲ ನೀಡಿವೆ ಹೊರತು ಬಂದ್ ನಲ್ಲಿ ಭಾಗಿಯಾಗಿಲ್ಲ. ಇನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಬಂದ್ ನಲ್ಲಿ ಭಾಗಿಯಾಗಿಲ್ಲ. ಹಾಗಾಗಿ ರಾಜ್ಯಾದ್ಯಂತ ಚಿತ್ರಮಂದಿರಗಳು ತೆರೆದಿವೆ.
ಇನ್ನು ಆಟೋ ಮಾಲೀಕರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿತ್ತಿದ್ದು, ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ಸಿದ್ಧತೆ ನಡೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಇನ್ನೊಂದೆಡೆ ಆನಂದ್ ರಾವ್ ಸರ್ಕಲ್, ಮೌರ್ಯ ಸರ್ಕಲ್ ಬಳಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕನ್ನಡಿಗರಿಗೆ ಉದ್ಯೋಗ ನೀಡದ ಸರ್ಕಾರಗಳಿಗೆ ಕನ್ನಡಿಗರಿಗೆ ಅನ್ಯಾಯ ಮಾಡಿದ ಸರ್ಕಾರಕ್ಕೆ ದಿಕ್ಕಾರ ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೇ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿವೆ.
ಉಳಿದಂತೆ ಬಂದ್ ಬಿಸಿ ರಾಜಧಾನಿಯಲ್ಲಿ ಅಷ್ಟಾಗಿ ತಟ್ಟಿಲ್ಲ. ಅಂಗಡಿ ಮುಂಗಟ್ಟುಗಳು ಬಹುತೇಕ ತೆರೆದೇ ಇದ್ದು, ಹೋಟೆಲ್ಗಳು, ಚಿತ್ರಮಂದಿರಗಳು ಎಂದಿನಂತೆ ಕೆಲಸ ನಿರ್ವಹಿಸುತ್ತಿವೆ. ಜನ ನಿಬಿಡ ಪ್ರದೇಶವಾದ ಕೆ.ಆರ್. ಮಾರುಕಟ್ಟೆ ವಹಿವಾಟು ಅಬಾದಿತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ