Latest

ರಾಜ್ಯ ಬಜೆಟ್ 2023-24: ಸಮಗ್ರ ಮಾಹಿತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲ ದಿನಗಳು ಮಾತ್ರ ಬಾಕಿಯಿದ್ದು, ಈ ಸಂದರ್ಭದಲ್ಲಿ ಬಜೆಟ್ ನ್ನೇ ಅಸ್ತವನ್ನಾಗಿ ಪ್ರಯೋಗಿಸುವ ಮೂಲಕ ರಾಜ್ಯದ ಜನರ ಮನಗೆಲ್ಲುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ನಿರೀಕ್ಷೆಯಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ಶಿಕ್ಷಣ, ಕೃಷಿ, ಜಲಸಂಪನ್ಮೂಲ, ಲೋಕೋಪಯೋಗಿ ಇಲಾಖೆಗೆ ಬೃಹತ್ ಪ್ರಮಾಣದ ಹಣ ಘೋಷಣೆ ಮಾಡಿದಾರೆ. ಒಟ್ಟು 3,09,182 ಕೋಟಿ ರೂಪಾಯಿ ಗಾತ್ರದ ಬಜೆಟ್ ನಲ್ಲಿ ಪ್ರಮುಖವಾಗಿ ಆರು ವಲಯಗಳಲ್ಲಿ ಬಜೆಟ್ ವಿಂಗಡಣೆ ಮಾಡಲಾಗಿದೆ.

ರಾಜ್ಯದ ಅರ್ಥವ್ಯವಸ್ಥೆ
ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ಮುಂಗಡ ಅಂದಾಜಿನಂತೆ 2022-23ರಲ್ಲಿ ರಾಜ್ಯವು ಶೇ. 7.9 ರಷ್ಟು ಬೆಳವಣಿಗೆ ದಾಖಲಿಸಿದೆ. ವಲಯವಾರು ಬೆಳವಣಿಗೆಯನ್ನು ಗಮನಿಸಿದಾಗ, ರಾಜ್ಯದ ಆರ್ಥಿಕತೆಯ ಬೆಳವಣಿಗೆಗೆ ಸೇವಾ ಮತ್ತು ಕೈಗಾರಿಕೆ ವಲಯವು ಪ್ರಮುಖ ಕಾರಣವಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ 2022-23ರಲ್ಲಿ ಸೇವಾ ವಲಯವು ಶೇ.9.2 ರಷ್ಟು ಮತ್ತು ಕೈಗಾರಿಕಾ ವಲಯವು ಶೇ.5.1 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಅಕಾಲಿಕ ಹವಾಮಾನ ಪರಿಸ್ಥಿತಿಗಳ ಹೊರತಾಗಿಯು ಕೃಷಿ ವಲಯವು ಶೇ.5.5 ರಷ್ಟು ಬೆಳವಣಿಗೆಯನ್ನು ಹೊಂದಿದೆ. ಇದೆಲ್ಲವುಗಳ ಪರಿಣಾಮವಾಗಿ ರಾಜ್ಯದ ತಲಾ ಆದಾಯ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2.04 ಲಕ್ಷ ರೂ. ಗಳಿಂದ 3.32 ಲಕ್ಷ ರೂ. ಗಳಿಗೆ ಹೆಚ್ಚಿದೆ. ಕೇಂದ್ರ ಸರ್ಕಾರವು 2023-24 ನೇ ಸಾಲಿಗೆ ರಾಜ್ಯಕ್ಕೆ 37,252 ಕೋಟಿ ರೂ.ಗಳ ತೆರಿಗೆ ಪಾಲನ್ನು ಅಂದಾಜಿಸಿದೆ. ಇದು 2022-23ರ ಆಯವ್ಯಯ ಅಂದಾಜಿಗೆ ಹೋಲಿಸಿದರೆ ಶೇ.25 ರಷ್ಟು ಹೆಚ್ಚಾಗಿದೆ. ರಾಜ್ಯದ ಸ್ವಂತ ರಾಜಸ್ವ ಸಂಗ್ರಹಣೆ ಮತ್ತು ಕೇಂದ್ರ ಸರ್ಕಾರದ ತೆರಿಗೆ ಪಾಲಿನ ಹೆಚ್ಚಳವು 2022-23ರ ಪರಿಷ್ಕೃತ ಅಂದಾಜಿನಲ್ಲಿ ರಾಜ್ಯದ ರಾಜಸ್ವ ಕೊರತೆಯನ್ನು 8,703 ಕೋಟಿ ರೂ.ಗಳಷ್ಟು ಕಡಿಮೆ ಮಾಡಲು ಸಹಕಾರಿಯಾಗಿದೆ. ಇದರೊಂದಿಗೆ ವಿತ್ತೀಯ ಸುಸ್ಥಿರತೆಯ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಅಂದಾಜಿಸಿದ ಸಾಲವನ್ನು ಪೂರ್ಣಪ್ರಮಾಣದಲ್ಲಿ ಪಡೆಯದೆ ನಿಯಂತ್ರಿಸಲಾಗುತ್ತಿದೆ.

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ
ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಎಲ್ಲ ವರ್ಗಗಳ, ಎಲ್ಲ ಪ್ರದೇಶಗಳ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕತೆ ಸಂಬಂಧಿಸಿದ ಸೂಚ್ಯಂಕಗಳನ್ನು ರಾಜ್ಯ ಸರಾಸರಿಗಿಂತ ಹೆಚ್ಚು ಮಾಡಲು 3,000 ಕೋಟಿ ರೂ. ಗಳ ಯೋಜನೆಗಳನ್ನು ಘೋಷಿಸಲಾಗಿದೆ. ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಸೇವೆಯನ್ನು ಗುರುತಿಸಿ, ಅವರಿಗೆ ನೀಡುವ ಮಾಸಿಕ ಗೌರವಧನವನ್ನು 1,000 ರೂ. ದಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ. ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗುವುದು.ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ʻಮುಖ್ಯಮಂತ್ರಿ ವಿದ್ಯಾಶಕ್ತಿʼ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು.

100 ಕೋಟಿ ರೂ. ವೆಚ್ಚದಲ್ಲಿ 1,000 ಹೊಸ ಕಾರ್ಯಾಚರಣೆಗಳನ್ನು ಮಾಡಲು ʻಮಕ್ಕಳ ಬಸ್ಸುʼ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ವಿವೇಕ ಯೋಜನೆಯಡಿಯಲ್ಲಿ 7,601 ಶಾಲಾ ಮತ್ತು ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳನ್ನು 1,194 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಉತ್ತಮ ಮೂಲಭೂತ ಸೌಕರ್ಯಗಳು ಮತ್ತು ಸೂಕ್ತ ಕಲಿಕಾ ಸಂಪನ್ಮೂಲಗಳನ್ನು ಮಕ್ಕಳಿಗೆ ಒದಗಿಸಲು ಹೊಸ ಕೇಂದ್ರ ಪುರಸ್ಕೃತ ಯೋಜನೆಯಾದ PM SHRI ಯನ್ನು 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ. ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (KIT) ಗಳಾಗಿ ಉನ್ನತೀಕರಿಸಲು ಬೆಂಗಳೂರು, ಹಾವೇರಿ, ಹಾಸನ, ಕೆ.ಆರ್.ಪೇಟೆ, ತಳ್ಕಲ್, ರಾಮನಗರ ಹಾಗೂ ಕಾರವಾರ ಸರ್ಕಾರಿ ಎಂಇಂಜಿನಿಯರಿಂಗ್ ಕಾಲೇಜುಗಳನ್ನು ಗುರುತಿಸಲಾಗಿದೆ.

ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ʻಹಳ್ಳಿ ಮುತ್ತುʼ ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು CET ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು. ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ Academic Bank of Credits ಮತ್ತು Digilocker ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಕ್ರಮ ವಹಿಸಲಾಗುವುದು. ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಲ್ಲಿ ಸರಳ ಹಾಗೂ ಪಾರದರ್ಶಕ ಪ್ರವೇಶಾವಕಾಶಕ್ಕೆ ಏಕರೂಪ ವ್ಯವಸ್ಥೆ ಜಾರಿ. ಉನ್ನತ ಶಿಕ್ಷಣವನ್ನು ಬಲಪಡಿಸಲು ಒಟ್ಟು 125 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆ ಜಾರಿ.

100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ 53 ಸಮುದಾಯ ಆರೋಗ್ಯ ಕೇಂದ್ರಗಳು, 26 ತಾಲ್ಲೂಕು ಆಸ್ಪತ್ರೆ ಹಾಗೂ ಒಂದು1 ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಿಸಿ, ಲೋಕಾರ್ಪಣೆ ಮಾಡಲಾಗಿದ್ದು, ಉಳಿದ ಕಾಮಗಾರಿಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿವೆ. ಇದಕ್ಕಾಗಿ ಒಟ್ಟು 781 ಕೋಟಿ ರೂ. ಗಳನ್ನು ಒದಗಿಸಲಾಗಿದೆ. ರಾಜ್ಯದ 45 ತಾಲ್ಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡುವ ಮೂಲಕ ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ಒದಗಿಸಲು ಕ್ರಮ ವಹಿಸಲಾಗಿದೆ. ನಗರ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಲು ಅನುಮೋದನೆ. ʻʼಮನೆ ಮನೆಗೆ ಆರೋಗ್ಯʼ ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಯೋಜಿಸಲಾಗುವುದು. ಕರ್ನಾಟಕ ಮೆದುಳು ಆರೋಗ್ಯ ಯೋಜನೆಯನ್ನು 25 ಕೋಟಿ ರೂ. ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ವಿಸ್ತರಣೆ. ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚಲು ʻಜೀವಸುಧೆʼ ಎಂಬ ವ್ಯಾಪಕ ತಪಾಸಣಾ (Testing and Screening) ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜನೆ. ಕ್ಯಾನ್ಸರ್ ಪತ್ತೆಗೆ ಅಗತ್ಯವಿರುವ ಸಾಧನಗಳ ಖರೀದಿಗಾಗಿ 12 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 80,318 ಕೋಟಿ ರೂ. ಒದಗಿಸಲು ನಿರ್ಧರಿಸಲಾಗಿದೆ.

ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ

ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸಲು ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಲುವಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಯನ್ನು ಹೆಚ್ಚಿಸಲು ಬದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ 2022-23ರ ಆಯವ್ಯಯದಲ್ಲಿ ಅಂದಾಜಿಸಿದ 46,955 ಕೋಟಿ ರೂ. ಗಳಿಂದ 2023-24ನೇ ಸಾಲಿನಲ್ಲಿ 61,234 ಕೋಟಿ ರೂ. ಗಳಿಗೆ ಹೆಚ್ಚಿಸಲಾಗಿದೆ. ಇದು ಕಳೆದ ವರ್ಷದ ಆಯವ್ಯಯ ಅಂದಾಜಿಗಿಂತ ಶೇ.30.4ರಷ್ಟು ಹೆಚ್ಚಾಗಿದೆ. ಇದು ಕಳೆದ 10 ವರ್ಷಗಳಲ್ಲಿನ ಬಂಡವಾಳ ಹಂಚಿಕೆಯಲ್ಲಿ ಅತೀ ಹೆಚ್ಚಿನ ಏರಿಕೆಯಾಗಿದೆ. ಪ್ರಸಕ್ತ ವರ್ಷದ ಜನವರಿ ಅಂತ್ಯದವರೆಗೂ ರಾಜ್ಯದಲ್ಲಿ 33,991 ಕೋಟಿ ರೂ. ಗಳಷ್ಟು ಬಂಡವಾಳ ವೆಚ್ಚವಾಗಿರುತ್ತದೆ. ಇದು ಆಯವ್ಯಯ ಅಂದಾಜಿನ ಶೇ. 72ರಷ್ಟಿದೆ. ಕಳೆದ 10 ವರ್ಷಗಳಲ್ಲಿ ಆರ್ಥಿಕ ವರ್ಷದ ಜನವರಿ ಅಂತ್ಯದವರೆಗಿನ ಯಾವುದೇ ಸರ್ಕಾರವು ಸಾಧಿಸಿರದ ಅತೀ ಹೆಚ್ಚಿನ ಬಂಡವಾಳ ವೆಚ್ಚ ಇದಾಗಿರುತ್ತದೆ.

ಆರ್ಥಿಕ ಅಭಿವೃದ್ಧಿಗೆ ಉತ್ತೇಜನೆ ವಲಯಕ್ಕೆ 2023-24ನೇ ಸಾಲಿಗೆ 61,488 ಕೋಟಿ ರೂ. ಗಳ ಅನುದಾನ ಒದಗಿಸಲಾಗಿದೆ.

ಬೆಂಗಳೂರು ಸಮಗ್ರ ಅಭಿವೃದ್ಧಿ
ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೆ ಸರ್ಕಾರ ಆದ್ಯತೆ ನೀಡಿದೆ. ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೈ ಡೆನ್ಸಿಟಿ ಕಾರಿಡಾರ್‌ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹವನ್ನು ತಪ್ಪಿಸಲು, ಒಟ್ಟು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ.

2023-24 ರಿಂದ ವರ್ಷಕ್ಕೆ 15 ಲಕ್ಷ ಸಸಿ ನೆಡಲು ಮತ್ತು ಅರಣ್ಯ ಇಲಾಖೆಯ ಸಹಕಾರದೊಂದಿಗೆ 3 ಹೊಸ ಹೈಟೆಕ್‌ ನರ್ಸರಿಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. ಬಿಬಿಎಂಪಿ ಆಸ್ತಿಗಳ ಒತ್ತುವರಿ ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು 35 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ, ಬೋರ್ಡ್‌ಗಳ ಅಳವಡಿಕೆ ಮತ್ತು GPS ತಂತ್ರಾಂಶದ ಮುಖಾಂತರ ಕಣ್ಗಾವಲು ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ನಿರ್ಭಯ ಯೋಜನೆಯಡಿ ಬೆಂಗಳೂರಿನಲ್ಲಿ ʻThe Safe City Projectʼ ಅನ್ನು ಸಮರೋಪಾದಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ 1,640 ಸ್ಥಳಗಳಲ್ಲಿ 4,100 ಕ್ಯಾಮರಾ ಅಳವಡಿಕೆ.

ಮಾರುಕಟ್ಟೆಗಳು, ಬೃಹತ್ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ʻShe Toiletʼ ಗಳನ್ನು ನಿರ್ಮಿಸಲಾಗುವುದು. ಈ ಸಂಕೀರ್ಣದಲ್ಲಿ ಶೌಚಾಲಯಗಳು, ಫೀಡಿಂಗ್‌ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು SOS ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ, ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಿಸಲಾಗುವುದು. ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 2023-24ನೇ ಸಾಲಿಗೆ 9,698 ಕೋಟಿ ರೂ. ಗಳ ಅನುದಾನ ಒದಗಿಸಿದೆ.

ಸಂಸ್ಕೃತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ
ಕರ್ನಾಟಕ ರಾಜ್ಯವು ಸಾಂಸ್ಕೃತಿಕವಾಗಿ, ನೈಸರ್ಗಿಕವಾಗಿ ಅತ್ಯಂತ ಶ್ರೀಮಂತವಾಗಿದ್ದು, ಈ ಸಂಪನ್ಮೂಲಗಳನ್ನು ಅತ್ಯಂತ ಸಮರ್ಥವಾಗಿ, ಸುಸ್ಥಿರವಾಗಿ ಬಳಸಲು ಸರ್ಕಾರ ಕ್ರಮ ಕೈಗೊಂಡಿದೆ. ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ ʻಶ್ರೀ ಭುವನೇಶ್ವರಿʼ ತಾಯಿಯ ಬೃಹತ್‌ ಮೂರ್ತಿ ಹಾಗೂ ಥೀಮ್‌ ಪಾರ್ಕ್‌ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು. ʻನಮ್ಮ ಜಿಲ್ಲೆ ನಮ್ಮ ಸಂಸ್ಕೃತಿʼ ಎಂಬ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ ಮಾಡಲಾಗುವುದು. ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ಯವನ್ನು ನೀಡಲಾಗುವುದು. ಹಾಗೆಯೇ ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಒದಗಿಸಲಾಗುವುದು. 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸಲಾಗುವುದು. ಬೆಂಗಳೂರಿನ ಸಂಸ್ಕೃತಿ ಹಾಗೂ ಧಾರ್ಮಿಕ ಶ್ರದ್ಧೆಯ ಅವಿಭಾಜ್ಯ ಅಂಗವಾಗಿರುವ ಕರಗ ಉತ್ಸವ ಆಚರಣೆಗೆ ಸರ್ಕಾರದಿಂದ ವಿಶೇಷ ಅನುದಾನವನ್ನು ಒದಗಿಸಲಾಗುವುದು.

ಯುವಜನರ ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ಯುವ ನೀತಿ 2022 ಅನ್ನು ರೂಪಿಸಲಾಗಿದೆ. ಗ್ರಾಮೀಣ ಯುವಕರ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು 2022-23ನೇ ಸಾಲಿನಲ್ಲಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚನೆಯಾದ ಸ್ವಾಮಿ ವಿವೇಕಾನಂದ ಯುವಕರ ಜಂಟಿ ಬಾಧ್ಯತಾ ಗುಂಪುಗಳಿಗೆ ತಲಾ 10,000 ರೂ. ನಂತೆ ಸುತ್ತುನಿಧಿ ಹಾಗೂ ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಕೈಗೊಳ್ಳಲು ಒಂದು ಲಕ್ಷ ರೂ. ಒಳಗೊಂಡಂತೆ ಬ್ಯಾಂಕ್‌ಗಳ ಸಹಾಯದೊಂದಿಗೆ 5 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುವುದು. ʻಬದುಕುವ ದಾರಿʼ ಎಂಬ ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರೆಸಲು ಸಾಧ್ಯವಾಗದೇ ಇರುವ ಯುವಜನರಿಗೆ ಐಟಿಐಗಳಲ್ಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕ 1,500 ರೂ. ಗಳ ಶಿಷ್ಯವೇತನವನ್ನು ನೀಡಲಾಗುವುದು. ಈ ತರಬೇತಿಯನ್ನು ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿಯಲ್ಲಿ 3 ತಿಂಗಳಿಗೆ ಮಾಸಿಕ 1,500 ರೂ. ಗಳ ಶಿಶಿಕ್ಷು ಭತ್ಯೆಯನ್ನು ನೀಡಲಾಗುವುದು. ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು ʻಯುವಸ್ನೇಹಿʼ ಎಂಬ ಹೊಸ ಯೋಜನೆಯಡಿ ತಲಾ 2,000 ರೂ. ಗಳ ಒಂದು ಬಾರಿಯ ಆರ್ಥಿಕ ನೆರವು ನೀಡಲಾಗುವುದು.

ಪ್ರಪ್ರಥಮ ಬಾರಿಗೆ 100 ಕೋಟಿ ರೂ. ಅನುದಾನದಲ್ಲಿ ಹಸಿರು ಆಯವ್ಯಯವನ್ನು (Eco Budget) ಘೋಷಿಸಲಾಗಿದ್ದು, ಅದರಂತೆ ಪರಿಸರದ ಮೇಲೆ ಮಾನವ ನಿರ್ಮಿತ ಒತ್ತಡಗಳಿಂದ ಉಂಟಾದ ದುಷ್ಪರಿಣಾಮವನ್ನು ಸರಿದೂಗಿಸಲು ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ.

ಸಂಸ್ಕೃತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣಾ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 3,458 ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು
ರಾಜ್ಯದ ತಲಾ ಆದಾಯ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2.04 ಲಕ್ಷ ರೂ. ಗಳಿಂದ 3.32 ಲಕ್ಷ ರೂ. ಗಳಿಗೆ ಹೆಚ್ಚಿದೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದೇಶದ ಸರಾಸರಿಗಿಂತ ಕಡಿಮೆಯಾಗಿದ್ದು, ಅಭಿವೃದ್ಧಿಯ ಬೆಳವಣಿಗೆ ದರ ಹೆಚ್ಚಾಗಿದೆ. ಶಿಶು ಮರಣ ದರ ಹಾಗೂ ತಾಯಿ ಮರಣ ದರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಇದಲ್ಲದೆ ರಾಜ್ಯದಲ್ಲಿ ಪ್ರವಾಹ, ಬೆಳೆನಷ್ಟ, ಮಾನವ-ವನ್ಯಪ್ರಾಣಿ ಸಂಘರ್ಷ, ಜಾನುವಾರುಗಳಿಗೆ ಸಾಂಕ್ರಾಮಿಕದಂತಹ ಸಂಕಷ್ಟಗಳು ತಲೆದೋರಿದಾಗಲೆಲ್ಲ ನಮ್ಮ ಸರ್ಕಾರ ಜನರ ನೆರವಿಗೆ ಧಾವಿಸಿದೆ. ಸಕಾಲದಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಮ್ಮ ಸರ್ಕಾರವು ನಿರ್ಧರಿಸಿದೆ. ಈ ಎಲ್ಲಾ ಹುದ್ದೆಗಳ ಆಯ್ಕೆ ಪ್ರಕ್ರಿಯೆಯನ್ನು 2023-24ನೇ ಸಾಲಿನಲ್ಲಿಯೇ ಪೂರ್ಣಗೊಳಿಸಿ ನೇಮಕಾತಿ ಆದೇಶವನ್ನು ನೀಡಲಾಗುವುದು. ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗುವುದು. ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಸರ್ಕಾರಕ್ಕೆ ಒಟ್ಟು 5 ವರದಿಗಳನ್ನು ಸಲ್ಲಿಸಿದ್ದು, ಇದರಲ್ಲಿ 3,630 ಇಲಾಖಾವಾರು ಶಿಫಾರಸ್ಸುಗಳು ಒಳಗೊಂಡಿವೆ. ಆಯೋಗದ ಶಿಫಾರಸುಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಆಡಳಿತದಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ತರುವ ಮೂಲಕ ಮನೆ ಬಾಗಿಲಿಗೇ ಸರ್ಕಾರ ತಲುಪಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸರ್ಕಾರಿ ಜಮೀನನ್ನು ದಶಕಗಳಿಂದ ಒತ್ತುವರಿ ಮಾಡಿಕೊಂಡು ಕಾಫಿ, ಟೀ, ಮತ್ತು ಇನ್ನಿತರೆ ಪ್ಲಾಂಟೇಶನ್‌ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು 30 ವರ್ಷಗಳ ಅವಧಿಗೆ ಗರಿಷ್ಠ 25 ಎಕರೆ ಮಿತಿಗೆ ಒಳಪಟ್ಟು ಗುತ್ತಿಗೆ ನೀಡಲು ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, 2023-24ನೇ ಸಾಲಿನಲ್ಲಿ ಈ ಕಾಯ್ದೆ ಜಾರಿಗೊಳಿಸಲು ನಿಯಮಗಳನ್ನು ರೂಪಿಸಲಾಗುವುದು. ಇದೇ ರೀತಿ ಸಮಸ್ಯೆಗಳಿರುವ ಮತ್ತಿತರೆ ಪ್ರಕರಣಗಳನ್ನೂ ಸಹ ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಲು ಕ್ರಮ ಕೈಗೊಳ್ಳಲಾಗುವುದು.ವಿವಿಧ ನಾಗರಿಕ ಸೇವೆಗಳನ್ನು ಜನರಿಗೆ ಸ್ಥಳೀಯವಾಗಿ ದೊರಕಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಿದೆ. ʻಹಲೋ ಕಂದಾಯ ಸಚಿವರೇʼ ಸಹಾಯವಾಣಿ ಯೋಜನೆಯಡಿ ಒಂದು ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 79,951 ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ನೀಡಲಾಗಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೇರು ಕೃಷಿ ಉದ್ದೇಶಕ್ಕಾಗಿ ಗುತ್ತಿಗೆಗೆ ನೀಡಲಾಗಿರುವ ಸುಮಾರು 4,292 ಎಕರೆ ಜಮೀನನ್ನು ಮಾರ್ಗಸೂಚಿ ಮೌಲ್ಯವನ್ನು ವಿಧಿಸಿ ಖಾಯಂ ಆಗಿ ಮಂಜೂರು ಮಾಡಲು ಕರ್ನಾಟಕ ʻಭೂ ಮಂಜೂರಾತಿ ನಿಯಮಗಳು 1969ʼ ಗೆ ತಿದ್ದುಪಡಿ ತರಲು ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.

ಒಟ್ಟಾರೆ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು ವಲಯಕ್ಕೆ 2023-24ನೇ ಸಾಲಿಗೆ 68,585 ಕೋಟಿ ರೂ. ಗಳ ಅನುದಾನ ಘೋಷಿಸಲಾಗಿದೆ.

ಯಾವ ಇಲಾಖೆ ಎಷ್ಟು?

ಶಿಕ್ಷಣ ಕ್ಷೇತ್ರಕ್ಕೆ – 37,960 ಕೋಟಿ ಮೀಸಲು
ಜಲಸಂಪನ್ಮೂಲ ಇಲಾಖೆ-22,854 ಕೋಟಿ ರೂ
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ – 20,494 ಕೋಟಿ ರೂಪಾಯಿ
ನಗರಾಭಿವೃದ್ಧಿ -17,938 ಕೋಟಿ ರೂಪಾಯಿ
ಕಂದಾಯ ಇಲಾಖೆ – 15,943 ಕೋಟಿ ರೂಪಾಯಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 15,151 ಕೋಟಿ
ಒಳಾಡಳಿತ ಹಾಗೂ ಸಾರಿಗೆ -14,509 ಕೋಟಿ ರೂಪಾಯಿ
ಇಂಧನ ಇಲಾಖೆ -13,803 ಕೋಟಿ ರೂಪಾಯಿ
ಸಮಾಜ ಕಲ್ಯಾಣ – 11,163 ಕೋಟಿ ರೂಪಾಯಿ
ಲೋಕೋಪಯೋಗಿ ಇಲಾಖೆ – 10,741 ಕೋಟಿ ರೂಪಾಯಿ
ಕೃಷಿ ಹಾಗೂ ತೋಟಗಾರಿಕೆ ಇಲಾಖೆ -9,456 ಕೋಟಿ ರೂಪಾಯಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-5,676 ಕೋಟಿ ರೂಪಾಯಿ
ಆಹಾರ ಇಲಾಖೆ -4,600 ಕೋಟಿ ರೂಪಾಯಿ
ವಸತಿ ಇಲಾಖೆ -3,787 ಕೋಟಿ ರೂಪಾಯಿ ಮೀಸಲಿಡಲಾಗಿದೆ.

*ಉದ್ಯೋಗ ಸಿಗದ ಪದವೀಧರರಿಗೆ ಯುವಸ್ನೇಹಿ ಯೋಜನೆ ಆರಂಭ*

https://pragati.taskdun.com/karnataka-budget-2023cm-basavaraj-bommaividhanasoudhayuva-snehi-yojana/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button