ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ 14ನೇಯ ದಾಖಲೆ ಬಜೆಟ್ ಆಗಿದೆ. ಹಾಗಾಗಿ ಸಹಜವಾಗಿಯೇ ಹೊಸ ಸರ್ಕಾರದ ಹಾಗೂ ಸಿದ್ದರಾಮಯ್ಯನವರ ಆಯವ್ಯಯಗಳ ಮೇಲೆ ಜನರ ನಿರೀಕ್ಷೆಗಳು ಹೆಚ್ಚಿವೆ.
ಮಧ್ಯಾಹ್ನ 12 ಗಂಟೆಗೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಸಿಎಂ ಸಿದ್ದರಾಮಯ್ಯ ಪಾತ್ರರಾಗಲಿದ್ದಾರೆ. ಮಾಜಿ ಸಿಎಂ ರಾಮಕೃಷ್ಣ ಹೆಗಡೆ 13 ಬಾರಿ ಬಜೆಟ್ ಮಂಡನೆ ಮಾಡಿದ್ದರು. ಸಿಎಂ ಸಿದ್ದರಾಮಯ್ಯನವರಿಗೆ ಗ್ಯಾರಂಟಿ ಯೋಜನೆ ಅನುದಾನದ ಜೊತೆ ಇತರ ಅನುದಾನ ಹಂಚಿಕೆ ವಿಚಾರವಾಗಿ ಈ ಬಾರಿ ಬಜೆಟ್ ಸವಾಲಿನದ್ದಾಗಿದೆ ಎನ್ನಲಾಗುತ್ತಿದೆ.
ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ದೂರದೃಷ್ಟಿ ಆಲೋಚನೆಗಳನ್ನು ಕ್ರೂಢಿಕರಿಸಿ, ಮಹತ್ವದ ಬಜೆಟ್ ಮಂಡನೆಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಿದ್ಧತೆ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅನುದಾನ, ರೈತರಿಗೆ ಬಂಪರ್ ಕೊಡುಗೆಗಳ ನೀರೀಕ್ಷೆ, ಉದ್ಯೋಗಾಕಾಂಕ್ಷಿಗಳು, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ.
ಲೋಕಸಭಾ ಚುನಾವಣೆ ದೃಷ್ಟಿಯಿಂದ ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಕೆಲವೇ ಹೊತ್ತಲ್ಲಿ ಬಜೆಟ್ ಮಂಡನೆಗೂ ಮುನ್ನ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಸಭೆಗೆ ಎಲ್ಲಾ ಶಾಸಕರು ಹಾಜರಾಗುವಂತೆ ಖುದ್ದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಅಲ್ಲದೇ ಸದನದಲ್ಲಿ ಕಾಂಗ್ರೆಸ್ ಶಾಸಕರು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ತಾಕೀತು ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ