Kannada NewsKarnataka NewsLatest

*ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ*: *ಯಾರಿಗೆ ಯಾವ ಜವಾಬ್ದಾರಿ?*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರಿದಿದೆ. ಇತ್ತೀಚೆಗಷ್ಟೇ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಇದೀಗ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಕೆಲ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿದೆ. ಈ ಬದಲಾವಣೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಮುಖ್ಯ ಆಯುಕ್ತರಾಗಿದ್ದ ಮಹೇಶ್ವರ ರಾವ್ ಅವರ ವರ್ಗಾವಣೆ ಪ್ರಮುಖವಾಗಿದೆ.

ನವೆಂಬರ್ 26ರಂದು ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಪ್ರಮುಖ ಇಲಾಖೆಗಳ ಆಡಳಿತ ಜವಾಬ್ದಾರಿಗಳಲ್ಲಿ ಬದಲಾವಣೆ ಮಾಡಿದೆ. ಅಂಜುಮ್ ಪರ್ವೇಜ್, ರಾಜೇಂದರ್ ಕುಮಾರ್ ಕಟಾರಿಯಾ ಮತ್ತು ಮಹೇಶ್ವರ ರಾವ್ ಅವರ ಜವಾಬ್ದಾರಿಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಇತರ ಅಧಿಕಾರಿಗಳಿಗೂ ಹೆಚ್ಚುವರಿ ಹೊಣೆ ನೀಡಲಾಗಿದೆ.

ಯಾರಿಗೆ ಯಾವ ಜವಾಬ್ದಾರಿ?

ಅಂಜುಮ್ ಪರ್ವೇಜ್: ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಅಂಜುಮ್ ಪರ್ವೇಜ್ ಅವರಿಗೆ ಇದೀಗ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ನೀಡಲಾಗಿದೆ. ಇದರ ಜೊತೆಗೆ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆಯನ್ನೂ ವಹಿಸಲಾಗಿದೆ.

ರಾಜೇಂದರ್ ಕುಮಾರ್ ಕಟಾರಿಯಾ: ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ಒಳಾಡಳಿತ ಅಂದರೆ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಮಹೇಶ್ವರ ರಾವ್ ಎಂ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಮುಖ್ಯ ಆಯುಕ್ತರಾಗಿದ್ದ ಮಹೇಶ್ವರ ರಾವ್ ಅವರಿಗೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

ಈ ಹಿಂದೆ ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ಮಹೇಶ್ವರ ರಾವ್ ಅವರನ್ನೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ಮುಂದುವರಿಸಲಾಗಿತ್ತು. ಅದಕ್ಕೂ ಮೊದಲು ಅವರು ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.

ಇತರ ಅಧಿಕಾರಿಗಳಿಗೂ ಹೆಚ್ಚುವರಿ ಹೊಣೆ

ಕೃಷ್ಣ ಬಾಜಪೈ ಅವರನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಡಾ. ಗಿರೀಶ್ ದಿಲೀಪ್ ಬಡೋಲೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕ ಹಾಗೂ ಇ-ಆಡಳಿತದ ಜವಾಬ್ದಾರಿಯ ಜೊತೆಗೆ ವಿಜ್ಞಾನ ಮತ್ತು ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

ವಾಣಿಜ್ಯ ತೆರಿಗೆ ಇಲಾಖೆಯ ಸೇವಾ ವಿಶ್ಲೇಷಣಾ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದ ಅಪರ್ಣಾ ರಮೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಮಾಹಿತಿ ತಂತ್ರಜ್ಞಾನ ವಿಭಾಗದ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

ಈ ವರ್ಗಾವಣೆ ಮತ್ತು ಹೊಸ ಜವಾಬ್ದಾರಿಗಳ ಮೂಲಕ ರಾಜ್ಯದ ಪ್ರಮುಖ ಆಡಳಿತ ವಿಭಾಗಗಳಲ್ಲಿ ಅಧಿಕಾರಿಗಳ ಹೊಣೆಗಾರಿಕೆಯನ್ನು ಮರುಹಂಚಿಕೆ ಮಾಡಲಾಗಿದೆ.

Related Articles

Back to top button