
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ (ಇಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳು) ಸರ್ಕಾರಿ ಕೋಟಾದ ಸೀಟುಗಳ ಪ್ರವೇಶದಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯು “ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶ ನಿಯಮಗಳು (ತಿದ್ದುಪಡಿ) 2026″ರ ಕರಡು ನಿಯಮ ಅಧಿಸೂಚನೆಯನ್ನು ಹೊರಡಿಸಿದೆ.
ಇದೂವರೆಗೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಒಟ್ಟಾರೆ 15% ಮೀಸಲಾತಿ ನೀಡಲಾಗುತ್ತಿತ್ತು. ಇದರಲ್ಲಿ ಇನ್ನುಮುಂದೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5 ರಷ್ಟು ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಯಾವುದೇ (ಖಾಸಗಿ ಸೇರಿದಂತೆ) ಶಿಕ್ಷಣ ಸಂಸ್ಥೆಗಳು/ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇಕಡ 7.5 ರಷ್ಟು ಮೀಸಲಾತಿ ನೀಡಲಾಗುತ್ತದೆ.
ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇ. 7.5 ರಷ್ಟು ಸೀಟುಗಳು ಮೀಸಲಿರಲಿವೆ. ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026 ಅಧಿಸೂಚನೆ ಇದಾಗಿದ್ದು,ಕರಡು ನಿಯಮಕ್ಕೆ ಆಕ್ಷೇಪಣೆ ಮತ್ತು ಸಲಹೆಗಳನ್ನ ಆಹ್ವಾನಿಸಿದೆ.
ಈ ಕರಡು ನಿಯಮಾವಳಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಥವಾ ಬಾಧಿತ ವ್ಯಕ್ತಿಗಳು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು (ಎಂ.ಎಸ್. ಬಿಲ್ಡಿಂಗ್, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001) ಇವರಿಗೆ ಲಿಖಿತ ರೂಪದಲ್ಲಿ ಕಳುಹಿಸಬಹುದಾಗಿದೆ. ಸಲ್ಲಿಕೆಯಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ನಿಯಮಗಳು ಅಂತಿಮವಾಗಿ ಜಾರಿಗೆ ಬರಲಿವೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ, ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಘೋಷಿಸಿದ್ದರು.



