ಪ್ರಗತಿವಾಹಿನಿ ಸುದ್ದಿ; ಕೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು ಮಹಾರಾಷ್ಟ್ರ ಸರ್ಕಾರ ಕೊಲ್ಲಾಪುರದಲ್ಲಿ ನಿಷೇಧಾ ಜ್ಞೆ ಜಾರಿಗೊಳಿಸಿದೆ.
ಕೊಲ್ಲಾಪುರದಲ್ಲಿ ಡಿಸೆಂಬರ್ 23ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಹಾ ವಿಕಾಸ್ ಅಘಾಡಿ ಕಾರ್ಯಕರ್ತರ ಧರಣಿ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕಾರ್ಯಕರ್ತರ ಧರಣಿ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಡಿಸೆಂಬರ್ 9ರಿಂದ ಡಿಸೆಂಬರ್ 23ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೊಮ್ಮಾಯಿ ಟ್ವೀಟ್
ಈ ಮಧ್ಯೆ, ಮಹಾರಾಷ್ಟ್ರ ಸಂಸದರು ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.
ಶುಕ್ರವಾರ ರಾತ್ರಿ ಬೊಮ್ಮಾಯಿ ಟ್ವೀಟ್ ಮಾಡಿ ಕರ್ನಾಟಕದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಈ ಭೇಟಿಯಿಂದ ಕರ್ನಾಟಕದ ಮೇಲೆ ಮತ್ತು ಗಡಿ ವಿವಾದದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.
ಜೊತೆಗೆ ಕರ್ನಾಟಕದ ಸಂಸದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮವಾರ ಭೇಟಿ ಮಾಡುವಂತೆ ತಿಳಿಸಿರುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ತಾವೂ ಶೀಘ್ರವೇ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕರ್ನಾಟಕದ ನಿಲುವನ್ನು ತಿಳಿಸುವುದಾಗಿ ಹೇಳಿದ್ದಾರೆ.
“ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ. ಈ ಪ್ರಕರಣ ಸುಪ್ರೀಂ ಕೊರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ನಮ್ಮ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
“ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸೋಮವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು ಕೇಂದ್ರ ಗೃಹ ಸಚಿವರನ್ನು ಶೀಘ್ರವೇ ಭೇಟಿ ಮಾಡಲಿದ್ದೇನೆ” ಎಂದೂ ಬೊಮ್ಮಾಯಿ ಹೇಳಿದ್ದಾರೆ.
ಇವೆಲ್ಲದರ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಡಿಸೆಂಬರ್ 14ರಂದು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.
ಮಹಾರಾಷ್ಟ್ರ ನಿಯೋಗದಿಂದ ಅಮಿತ್ ಶಾ ಭೇಟಿ: ಸಿಎಂ ಬೊಮ್ಮಾಯಿ ಟ್ವೀಟರ್ ಪ್ರತಿಕ್ರಿಯೆ
https://pragati.taskdun.com/amit-shah-met-by-maharashtra-delegation-cm-bommais-twitter-reaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ