
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲ ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ತಾಪಮಾನ ಕೊಂಚ ತಣ್ಣಗಾಗಿಗೆ. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಒಟ್ಟೂ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರ್ಗಿ, ಯಾದಗಿರಿ, ಬಿಜಾಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಕೋಲಾರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ 30 ರಿಂದ 40km/h ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.


