*ರಾಜ್ಯದಲ್ಲಿ ಮುಂದಿನ ಮೂರು ದಿನ ಜೋರಾಗಲಿದೆ ಮಳೆ ಅಬ್ಬರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಮುಂಗಾರು ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸೋಮವಾರ, ಬುಧವಾರ ಮತ್ತು ಗುರುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು ಕರ್ನಾಟಕಕ್ಕೂ ಸೋಮವಾರದಿಂದ ಗುರುವಾರದವರೆಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು ಮತ್ತು ಚಿತ್ರದುರ್ಗದಲ್ಲಿಯೂ ಬುಧವಾರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮುಂದಿನ 4–5 ದಿನಗಳಲ್ಲಿ ಮುಂಗಾರು ಕರ್ನಾಟಕದ ಉಳಿದ ಭಾಗಗಳಲ್ಲಿಗೂ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಗರದಲ್ಲಿ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣ ಮತ್ತು ಮಧ್ಯಂತರ ಮಳೆಯೊಂದಿಗೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.



