
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಇಂದು ಹಾಗೂ ನಾಳೆ ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಮೇ 10ರಂದು ಪಶ್ಚಿಮ ಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 11ರಂದು ದಕ್ಷಿಣ ಒಳನಾಡಿನಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿಯ ಸಮುದ್ರ ತೀರದಲ್ಲಿ ಮೋಕಾ ಚಂಡಮಾರುತ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮೇ 12ರವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
 
					 
				 
					 
					 
					 
					
 
					 
					 
					


