
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಆಗಸ್ಟ್ 13 ರವರೆಗೆ ವರುಣನ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ ಆಗಸ್ಟ್ 10 ಮತ್ತು 11 ರಂದು ಹಗುರ ಮಳೆಯಾಗಲಿದೆ. ಬಳಿಕ ಆಗಸ್ಟ್ 12 ಮತ್ತು 13 ರಂದು ಈ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಜಿಲ್ಲೆಗಳ ಪೈಕಿ ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಆಗಸ್ಟ್ 10 ರಿಂದ 13 ರವರೆಗೆ ಒಂದೆರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಆಗಸ್ಟ್ 13ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

