ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿಸಲಾಗಿದ್ದು, ನದಿ ಪಾತ್ರದ ಜನತೆ ಭಯಭೀತರಾಗಿದ್ದಾರೆ.
ಮಹಾ ಮಳೆಗೆ ಬೆಳಗಾವಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮತ್ತೆ ನೆರೆ ಪ್ರವಾಹ ಭೀತಿ ಎದುರಾಗಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ ನದಿಗೆ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿ ಬಿಡಲಾಗುತ್ತಿದ್ದು, ಚಿಕ್ಕೋಡಿ, ನಿಪ್ಪಾಣಿಯಲ್ಲಿ 7 ಸೇತುವೆಗಳು ಜಲಾವೃತವಾಗಿವೆ.
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಸಂಜೆ ವೇಳೆಗೆ 50 ಸಾವಿರ ಕ್ಯೂಸೆಕ್ ನೀರು ಬಿಡುವ ಪ್ರಮಾಣ ಹೆಚ್ಚಳ ಮಾಡಲಾಗುತ್ತದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಬೆಳಗಾವಿಯ ಹಲವು ಭಾಗಗಳಲ್ಲಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಕ್ಕೆ ಇನ್ನು 4 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ಹವಾಮಾನ ಇಲಾಖೆ ಆಗಸ್ಟ್ 10 ರವರೆಗಿನ ಜಿಲ್ಲೆಗಳ ಹವಾಮಾನ ಮಾಹಿತಿಯನ್ನು ಬಿಡುಗಡೆ ಮಾಡಿದ್ದು ಸೋಮವಾರದವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲೂ ಧಾರಾಕಾರ ಮಳೆಯ ಎಚ್ಚರಿಕೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಬಾಗಲಕೋಟೆ, ಕಲಬುರಗಿ, ಬೀದರ್, ರಾಯಚೂರು, ಚಾಮರಾಜನಗರದಲ್ಲಿ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.
ಇನ್ನು ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ. ನೇತ್ರಾವತಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನೇತ್ರಾವತಿ ಸ್ನಾನ ಘಟ್ಟದ ಬಳಿ ಭಕ್ತರಿಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ.
ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ತುಂಗೆ ಮೈದುಂಬಿ ಹರಿಯುತ್ತಿದ್ದಾಳೆ. ಶೃಂಗೇರಿಯ ಗಾಂಧಿ ಮೈದಾನ, ಕಪ್ಪೆ ಶಂಕರ ದೇವಾಲಯ ಮುಳುಗಡೆಯಾಗಿದೆ.
ಚಿಕ್ಕಮಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಇನ್ನಷ್ಟು ಮಳೆಯಾಗಲಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಪಾತ್ರದ ಜನರಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚಿಸಲಾಗಿದೆ. ಇನ್ನು ಕೊಡಗು ಜಿಲೆಯಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತವುಮ್ಟಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಎನ್ ಡಿ ಆರ್ ಎಫ್ ತಂಡದಿಂದ ಶೋಧಕಾರ್ಯ ಆರಂಭವಾಗಿದೆ. ಇನ್ನೊಂದೆಡೆ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬಾಗಮಂಡಲ ತಲಕಾವೇರಿ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಲವು ಗ್ರಾಮಗಳು ಮುಳುಗಡೆಯಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ