ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಕರುನಾಡಿಗೆ ವರಣನ ಕಂಟಕವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಈಗಾಗಲೇ ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗಗಳಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಇನ್ನೂ ಎರಡು ದಿನ ಮಳೆ ಹೆಚ್ಚಲಿದ್ದು, ಸೆ.22 ರವರೆಗೆ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಬೆಳಗಾವಿ, ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಧಾರವಾಡ ಹಾವೇರಿ ಜಿಲ್ಲೆಗಳಲ್ಲೂ ಎರಡು ದಿನ ವರುಣನ ಆರ್ಭಟ ಮುಂದುವರಿಯಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ನಡುವೆ ಭೀಮಾ ನದಿ ತೀರದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಭೀತಿ ಎದುರಾಗಿದೆ. ಸೊನ್ನಾ ಬ್ಯಾರೇಜ್ ನಿಂದ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ನೀರಿನ ಪ್ರಮಾಣ ಇನ್ನಷ್ಟು ಹೆಚ್ಚಾದಲ್ಲಿ ಪ್ರವಾಹ ಉಂಟಾಗುವ ಆತಂಕ ಎದುರಾಗಿದೆ.
ಇನ್ನು ರಾಯಚೂರು ಜಿಲ್ಲೆಯ ಸರ್ಜಾಪುರ ಗ್ರಾಮದಲ್ಲಿ ನೂರಾರು ಎಕರೆ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ಸೇತುವೆಗಳು ಮುಳುಗಡೆಯಾಗಿವೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ