
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸುತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಕೆಲವು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿಯಿಂದ ಮುಂಜಾನೆವರೆಗೂ ಧಾರಾಕಾರ ಮಳೆ ಸುರಿದಿದ್ದು, ಬಿಸಿಲ ಝಳ, ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ಕೊಂಚ ತಂಪೆರೆದಂತಾಗಿದೆ. ಈ ನಡುವೆ ಇನ್ನೂ ಕೆಲ ದಿನಗಳಕಾಲ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು, ಕರಾವಳಿ ಹಾಗೂ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಬೆಂಅಗ್ಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ. ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.



