
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಪಡೆದಿದ್ದ ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಉತ್ತರ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಿದ್ದು, ಬೀದರ್ ಜಿಲ್ಲೆಯಲ್ಲಿ ಧರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಲಬುರ್ಗಿಯಲ್ಲಿಯೂ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆಯಾದರೂ ಭಾರಿ ಮಳೆಯಿಂದ ಉಂತಾದ ಅವಾಂತರಕ್ಕೆ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿವೆ. ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ತಗ್ಗಿದೆಯಾದರೂ ಹಲವೆಡೆ ಭೂಕುಸಿತವುಂಟಾಗುತ್ತಿದ್ದು, ಬೆಟ್ಟಗಳು ಬಿರುಕು ಬಿಡುತ್ತಿದ್ದು, ಬೆಟ್ಟದ ಕೆಳಭಾಗದ ಗ್ರಾಮಗಳಲ್ಲಿ ಅತಂಕ ಎದುರಾಗಿದೆ.
ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ; ಶಾಸಕ ಜಮೀರ್ ಗೆ ಡಿಕೆಶಿ ವಾರ್ನಿಂಗ್