*ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ. ಇನ್ನು ವಿಜಯನಗರ, ಬಳ್ಳಾರಿ ಭಾಗಗಳಲ್ಲಿಯೂ ಮಲೆಯಾಗುವ ಸಾಧ್ಯತೆಯಿದೆ.




