ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲಿಯೂ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿವೆ.
ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಮುಂದುವರೆಯಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜುಲೈ 13, 14 ಹಾಗೂ 15ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಹೆಚ್ಚಲಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 30-40ಕಿ.ಮೀ ಪಡೆದುಕೊಳ್ಳುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ, ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿಯೂ ಗಾಳಿ ಹೆಚ್ಚಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ