*ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನ: ರಾಜ್ಯದ ಈ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಳವಾಗುತ್ತಿದೆ. ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನವಿರಲಿದ್ದು, ಈಗಿರುವ ಉಷ್ಣಾಂಶಕ್ಕಿಂತ ಹಂತ ಹಂತವಾಗಿ 2 ಡಿಗ್ರಿ ಸೆಲ್ಶಿಯಸ್ನಿಂದ 3 ಡಿಗ್ರಿ ಸೆಲ್ಶಿಯಸ್ ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ.
ಅದರಲ್ಲಿಯೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲ ಅಬ್ಬರ ಹೆಚ್ಚಾಗಿದ್ದು, ಉಷ್ಣ ಅಲೆ ಅಥವಾ ಹೀಟ್ ವೇವ್ ಆರಂಭವಾಗಲಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಯಚೂರು, ಕೊಪ್ಪಳ, ಬಳ್ಳಾರಿ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಗದಗ, ವಿಜಯನಗರ, ಕಲಬುರಗಿ, ಯಾದಗಿರಿ ಮತ್ತು ಹಾವೇರಿಯಲ್ಲಿಯೂ ಉಷ್ಣ ಅಲೆ ಬೀಸಲಿದೆ.
ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಶಿಯಸ್ನಿಂದ 42 ಡಿಗ್ರಿ ಸೆಲ್ಶಿಯಸ್ ವರೆಗೆ ದಾಖಲಾಗುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನದ ಸಮಯದಲ್ಲಿ ಸಾರ್ವಜನಿಕರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸುವುದು ಸೂಕ್ತ. ಅನಗತ್ಯವಗಿ ಮನೆಯಿಂದ ಅಥವಾ ಕಚೇರಿಗಳಿಂದ ಹೊರ ಹೋಗದಂತೆ ಸೂಚಿಸಲಾಗಿದೆ.
ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಆರ್ದ್ರತೆ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.



