Kannada NewsKarnataka NewsLatest

*ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಬಿಸಿಲ ಝಳ: ಗರಿಷ್ಠ ತಾಪಮಾನ ಎಚ್ಚರಿಕೆ: ಹೀಟ್ ಸ್ಟ್ರೋಕ್ ಭೀತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಳವಾಗುತ್ತಿದೆ. ಈ ಬಾರಿ ಈ ಹಿಂದಿಗಿಂತಲೂ ಅತ್ಯಧಿಕ ತಾಪಮಾನ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚುತ್ತಿದೆ. ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಜನತೆ ಬಿಸಿಲಿನ ಬೇಗೆಯಿಂದ ತತ್ತರಿಸಲಿದ್ದಾರೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Home add -Advt

ಬಿಸಿಲ ಝಳ ಹೆಚ್ಚುತ್ತಿರುವುದರಿಂದ ಹೀಟ್ ಸ್ಟ್ರೋಕ್ ಉಂಟಾಗುವ ಸಾಧ್ಯತೆ ಇದೆ. ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷ ಬೆಂಗಳೂರಿಗರು ಬಿಸಿಲ ಧಗೆಯಿಂದ ತತ್ತರಿಸುವುದು ಖಚಿತವಾಗಿದೆ.

ಇನ್ನು ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ.

ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆ ಇರಲಿದೆ.


Related Articles

Back to top button