Kannada NewsKarnataka NewsLatest

*KAS ಪೂರ್ವಭಾವಿ ಪರೀಕ್ಷಾ ಫಲಿತಾಂಶ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗ (KPSC) ಕೆಎಎಸ್ (KAS) ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.

ಪರೀಕ್ಷೆ ನಡೆದ ಕೇವಲ ಐದು ದಿನಗಳಲ್ಲೇ ಫಲಿತಾಂಶ ಪ್ರಕಟಿಸುವ ಮೂಲಕ ಕೆಪಿಎಸ್‌ಸಿ ಈ ಬಾರಿ ಗಮನ ಸೆಳೆದಿದೆ. ನವೆಂಬರ್ 15ರಂದು ಪರೀಕ್ಷೆ ನಡೆದಿದ್ದು, ಮರುದಿನವೇ ಅಂದರೆ ನವೆಂಬರ್ 16ರಂದು ಕೆಪಿಎಸ್‌ಸಿ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಬಳಿಕ ಕೇವಲ 5 ದಿನದಲ್ಲೇ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ.

ಈ ಹಿಂದೆ ಕೆಪಿಎಸ್‌ಸಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರ ಮತ್ತು ಫಲಿತಾಂಶ ಪ್ರಕಟಣೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳಲಾಗುತ್ತಿತ್ತು. ಉದಾಹರಣೆಗೆ, 2024ರಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸುಮಾರು 40 ದಿನಗಳ ಕಾಲಾವಕಾಶ ತೆಗೆದುಕೊಳ್ಳಲಾಗಿತ್ತು. ಆದರೆ ಈ ಬಾರಿ ಕೇವಲ ಐದು ದಿನಗಳಲ್ಲೇ ಫಲಿತಾಂಶ ಪ್ರಕಟಿಸುವ ಮೂಲಕ ಆಯೋಗವು ತನ್ನ ಕಾರ್ಯವೈಖರಿಯಲ್ಲಿ ದಾಖಲೆ ಬರೆದಿದೆ.

ಫಲಿತಾಂಶ ಪ್ರಕಟಿಸಿರುವ ಕೆಪಿಎಸ್‌ಸಿ, ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ನವೆಂಬರ್ 23ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ನಿಗದಿತ ಅವಧಿಯಲ್ಲಿ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ಅರ್ಹತಾ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

ಆಕ್ಷೇಪಣೆಗಳ ಪರಿಶೀಲನೆ ಪೂರ್ಣಗೊಂಡ ನಂತರ ಕೆಪಿಎಸ್‌ಸಿ ಕೆಎಎಸ್ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಿದೆ. ಮುಖ್ಯ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗುವ ಮುಂದಿನ ಅಧಿಸೂಚನೆ ಹಾಗೂ ಅರ್ಹತಾ ಪಟ್ಟಿಯನ್ನು ಗಮನಿಸುತ್ತಿರಬೇಕು.

Related Articles

Back to top button