ಪ್ರಗತಿವಾಹಿನಿ ಸುದ್ದಿ: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಇಂದು ಬೆಳಗ್ಗೆ 10 ಗಂಟೆ 6 ನಿಮಿಷಕ್ಕೆ ಕೆಂಪಣ್ಣ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ, ಸಾಕಷ್ಟು ಹೋರಾಟ ನಡೆಸಿದ್ದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದರು.
“ಕೆಂಪಣ್ಣ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ನೋವುಂಟುಮಾಡಿದೆ. ಸದಾ ಕ್ರಿಯಾಶೀಲರಾಗಿ ಇರುತ್ತಿದ್ದ ಅವರ ಸಾವು ಗುತ್ತಿಗೆದಾರರ ಹೋರಾಟ ಮತ್ತು ದನಿಗೆ ತುಂಬಲಾರದ ನಷ್ಟ.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿರುದ್ಧ ದನಿ ಎತ್ತಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ ಕಾರಣಕ್ಕೆ ಇಳಿ ವಯಸ್ಸಿನಲ್ಲೂ ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿದ್ದರು.
ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲವಾಗಿದ್ದ ಕೆಂಪಣ್ಣ ಅವರು ನನ್ನ ಬಳಿ ಗುತ್ತಿಗೆದಾರರ ಸಮಸ್ಯೆಗಳನ್ನು ಇಟ್ಟುಕೊಂಡು ಅನೇಕ ಬಾರಿ ಚರ್ಚೆ ನಡೆಸಿದ್ದರು.
ಈ ಹಿರಿಯ ಜೀವದ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ, ಬಂಧು, ಬಳಗದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಟ್ವೀಟ್
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು.
ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ಟೀಟ್ ಮಾಡಿದ್ದಾರೆ..
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ