Kannada NewsKarnataka NewsLatest

*ಏರ್ ಪೊರ್ಟ್ ನಲ್ಲಿ ಬರೋಬ್ಬರಿ 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಜಪ್ತಿ: ವಿದೇಶಿ ಪ್ರಯಾಣಿಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾವನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನಿಂದ ಬರೋಬ್ಬರಿ 2.33 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ವಿಮಾನ ನಿಲ್ದಾಣಕ್ಕೆ ಬ್ಯಾಂಕಾಕ್‌ನಿಂದ ಬಂದಿದ್ದ ವಿಮಾನದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ವಾಡಿಕೆಯಂತೆ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಒಬ್ಬ ಪ್ರಯಾಣಿಕನ ಲಗೇಜ್ ಬ್ಯಾಗ್ ಮೇಲೆ ಅಧಿಕಾರಿಗಳಿಗೆ ತೀವ್ರ ಅನುಮಾನ ಮೂಡಿದೆ. ತಕ್ಷಣವೇ ಆತನ ಬ್ಯಾಗ್‌ ಅನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಒಳಗೆ ಅಡಗಿಸಿಟ್ಟಿದ್ದ ದುಬಾರಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.

ವಶಪಡಿಸಿಕೊಳ್ಳಲಾದ ಈ ಗಾಂಜಾ ಒಟ್ಟು 6.66 ಕೆಜಿ ತೂಕವಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು 2.33 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಗಾಂಜಾ ಸಮೇತ ಸಿಕ್ಕಿಬಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ತಕ್ಷಣವೇ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಆರೋಪಿಯನ್ನು ರಹಸ್ಯ ಸ್ಥಳದಲ್ಲಿ ಇರಿಸಲಾಗಿದ್ದು, ಡ್ರಗ್ಸ್ ಜಾಲದ ಹಿಂದೆ ಯಾರಿದ್ದಾರೆ, ಬೆಂಗಳೂರಿನಲ್ಲಿ ಇದನ್ನು ಯಾರಿಗೆ ತಲುಪಿಸಲು ತರಲಾಗುತ್ತಿತ್ತು ಎಂಬ ಬಗ್ಗೆ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button