ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಮುಂಬಯಿ -ಕರ್ನಾಟಕ ಪ್ರದೇಶವನ್ನು ಕಿತ್ತೂರು-ಕರ್ನಾಟಕ ಎಂದು ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ನಡೆಯಿತು.
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಿತ್ತೂರು-ಕರ್ನಾಟಕ ಘೋಷಣೆಯ ನಿರ್ಧಾರ ಪ್ರಕಟಿಸಿದ ಬಳಿಕ ಸಂಜೆ ಸಂಭ್ರಮ ಆಚರಿಸಲಾಯಿತು.
ಬೆಳಗಾವಿ ಸಂಸದರಾದ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರು ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಹ ಪ್ರತ್ಯೇಕವಾಗಿ ಸಂಭ್ರಮ ಆಚರಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಣ್ಯರು, ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಸರಕಾರ ಈಡೇರಿಸಿದೆ ಎಂದು ಸಂತಸವನ್ನು ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಕಿತ್ತೂರು ಉತ್ಸವದಲ್ಲಿ ನೀಡಿದ ಭರವಸೆಯನ್ನು ಈಡೇರಿಸಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.
ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಕೂಡ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ