Belagavi NewsBelgaum NewsKarnataka News

*ಚನ್ನಮ್ಮನ 200 ನೇ ವಿಜಯೋತ್ಸವಕ್ಕೆ ಅದ್ಧೂರಿ ಚಾಲನೆ* *ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಉಪಸ್ಥಿತಿ*

ಕಣ್ಮನ ಸೆಳೆದ ಕಲಾತಂಡಗಳು; ಚನ್ನಮ್ಮನ ಐತಿಹಾಸಿಕ ವಿಜಯೋತ್ಸವಕ್ಕೆ ಸಾಂಸ್ಕೃತಿಕ ಮೆರಗು

ಪ್ರಗತಿವಾಹಿನಿ ಸುದ್ದಿ: ಕಪ್ಪ ಕೇಳಿದ ಬ್ರಿಟೀಷರ ವಿರುದ್ಧ ರಣಕಹಳೆ ಮೊಳಗಿಸಿ ವಿಜಯ ದುಂಧುಬಿ ಮೊಳಗಿಸಿದ ವೀರ ರಾಣಿ ಕಿತ್ತೂರು ಚನ್ನಮ್ಮನ ಐತಿಹಾಸಿಕ 200 ನೇ ವಿಜಯೋತ್ಸವ ಮತ್ತು ಕಿತ್ತೂರು ಉತ್ಸವ-2024 ಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು.

ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಚನ್ನಮ್ಮನ ಕಿತ್ತೂರಿನ ಚನ್ನಮ್ಮನ ವೃತ್ತದಲ್ಲಿ ಬರಮಾಡಿಕೊಂಡು ಸಂಸ್ಥಾನದ‌ ಧ್ವಜಾರೋಹಣ ನೆರವೇರಿಸಿದರು.

ಇದೇ‌ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಸೇರಿದಂತೆ ಎಲ್ಲ ಗಣ್ಯರು ಪುಷ್ಪಾಲಂಕೃತ ಅಶ್ವಾರೂಢ ಚನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆಯನ್ನು ಮಾಡಿದರು. ಚನ್ನಮ್ಮನ ಕಿತ್ತೂರಿನ ಪ್ರವೇಶದ್ವಾರದ ಎರಡೂ ಬದಿಯಲ್ಲಿರುವ ಅಮಟೂರ ಬಾಳಪ್ಪ ಮತ್ತು ಶೂರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗಳಿಗೆ ಕೂಡ ಗಣ್ಯರು ಮಾಲಾರ್ಪಣೆ ಮಾಡಿದರು.

ಜನಾಕರ್ಷಿಸಿದ ಜಾನಪದ ಕಲಾವಾಹಿನಿಗೆ:
ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಆಕರ್ಷಕ ಜಾನಪದ ಕಲಾವಾಹಿನಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು.

ಕಿತ್ತೂರು ಚನ್ನಮ್ಮ ವೃತ್ತದಿಂದ ಆರಂಭಗೊಂಡ ಜಾನಪದ ಕಲಾವಾಹಿನಿಯು ನಿಚ್ಚಣಿಕಿ ಮಠದ ಆವರಣದವರೆಗೆ ಸಂಚರಿಸಿತು.

ಚಿಟ್ಟಿಮೇಳ, ಮಹಿಳಾ ವೀರಗಾಸೆ, ಈಶ್ವರ ವೇಷ, ಗಾರುಡಿ ಗೊಂಬೆ, ಮೀನು ನೃತ್ಯ, ಮಹಿಳಾ ಡೊಳ್ಳು ಕುಣಿತ, ಚೆಂಡೆವಾದ್ಯ, ಕುದುರೆ ಕುಣಿತ, ಕಂಸಾಳೆ, ನಂದಿಧ್ವಜ, ವೀರಗಾಸೆ, ಪೂಜಾ ಕುಣಿತ, ಡೊಳ್ಳು ಕುಣಿತ, ಕರಡಿಮಜಲು, ಕಂಸಾಳೆ, ಜಗ್ಗಲಗಿ ಸೇರಿದಂತೆ ವಿವಿಧ ಪ್ರಕಾರಗಳ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಜನಮನ ಆಕರ್ಷಿಸಿದವು.

ಇವುಗಳಲ್ಲದೇ ವಿವಿಧ ಇಲಾಖೆಗಳ ಸ್ತಬ್ಥಚಿತ್ರಗಳು ಕೂಡ ಮೆರವಣಿಗೆಯಲ್ಲಿ ಪಾಲ್ಗೊಂಡು ಸರಕಾರದ‌ ವಿವಿಧ‌ ಯೋಜನೆಗಳು, ಸೇವಾಸೌಲಭ್ಯಗಳ ಕುರಿತು‌ ಜಾಗೃತಿ ಮೂಡಿಸಿದವು.

ನಂತರ ಫಲಪುಷ್ಪ ಪ್ರದರ್ಶನ ಮತ್ತು ವಸ್ತುಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಾಯಿತು.

ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸಿಫ್(ರಾಜು) ಸೇಠ್, ವಿಧಾನಪರಿಷತ್ ಸದಸ್ಯ ಚನ್ಮರಾಜ ಹಟ್ಟಿಹೊಳಿ, ರಾಜಗುರು ಸಂಸ್ಥಾನ‌ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್.ಚನ್ನೂರ, ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ. ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಿತ್ತೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button