ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಗುಂಪುಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಗಡಿ ಪ್ರದೇಶಗಳಲ್ಲಿ ಪೊಲೀಸರು ಕಟೆಚ್ಚರ ಕೈಗೊಂಡಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿದ್ದಾರೆ.
ಕೊಲ್ಲಾಪುರದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆಯ ವೇಳೆ ಗುಂಪುಘರ್ಷಣೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂನ್ 19ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಇದೇ ವೇಳೆ ಬೆಳಗಾವಿಯ ಗಡಿ ಭಾಗಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ನಿಪ್ಪಾಣಿ, ಕೊಗನೊಳ್ಳಿ, ಬೋರಗಾಂವ್, ಅಕ್ಕೋಟ, ಎಕ್ಸಾಂಬಾ, ಬೇಡಕಿಹಾಳ, ಮಣಕಪುರ, ಸಿದ್ನಾಳ,ಮಂಗೂರ, ಚಂದೂರ ಸೇರಿದಂತೆ ಹಲವು ಗ್ರಾಮಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಲಾಗಿದೆ.
ಔರಂಗಜೇಬನ ವೈಭವೀಕರಿಸಿದ ವಾಟ್ಸಪ್ ಸ್ಟೇಟಸ್ ವೈರಲ್ ಆಗುತ್ತಿದ್ದಂತೆ ಕೊಲ್ಲಾಪುರದಲ್ಲಿ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಕೊಲ್ಲಾಪುರ ಬಂದ್ ವೇಳೆ ಗುಂಪುಘರ್ಷಣೆ ಹಿಂಸಾಚಾರ ನಡೆದಿತ್ತು. ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.
https://pragati.taskdun.com/two-childrenmissing-casedead-body-found/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ