Kannada NewsKarnataka NewsLatest

*ಕೆಪಿಎಸ್ ಸಿ ಅಕ್ರಮ ಖಂಡಿಸಿ ತೀವ್ರಗೊಂಡ ಪ್ರತಿಭಟನೆ: ವಿದ್ಯಾರ್ಥಿನಿಯರು, ಪರೀಕ್ಷಾರ್ಥಿಗಳನ್ನು ಅಮಾನವೀಯವಾಗಿ ಎಳೆದುಹಾಕಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷಾ ಹಗರಣ ಖಂಡಿಸಿ ಎಬಿವಿಪಿ ಕಾರ್ಯಕರ್ತರು, ವಿದ್ಯಾರ್ಥಿನಿಯರು, ಪರೀಕ್ಷಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಒಂದೆಡೆ ಮುಖ್ಯಮಂತ್ರಿ ಅವರ ಅಧಿಕೃತ ಗೃಹ ಕಚೇರಿ ಕೃಷ್ಣಾ ಬಳಿ ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೊಂದೆಡೆ ಫ್ರೀಡಂ ಪಾರ್ಕ್ ನಲ್ಲಿಯೂ ಪ್ರತಿಭಟನೆ ನಡೆಸಲಾಗುತ್ತಿದೆ.

ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಪರ್ಕ್ಷಾರ್ಥಿಗಳು ಕೆಪಿಎಸ್ ಸಿ ಅಕ್ರಮ ಖಂಡಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ತಪ್ಪಿತಸ್ಥರನ್ನು ಶಿಕ್ಷಿಸುವುದನ್ನು ಬಿಟ್ಟು ಅನಗತ್ಯ ವಿಳಂಬ ಮಾಡಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಉದ್ಯೋಗಾಕಾಂಕ್ಷಿಗಳಿಗೆ ತೊಂದರೆ ಕೊಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಎಬಿವಿಪಿ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಯತ್ನಿಸಿದ್ದಾರೆ.

2 ತಂಡಗಳಲ್ಲಿ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ಕೃಷ್ಣಾ ಕಚೇರಿ ಮುಂಭಾಗಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನ ತಡೆದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಮತ್ತೊಂದೆಡೆ ಫ್ರೀಡಂ ಪಾರ್ಕ್ ಬಳಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿಭಟನೆ ನಿಲ್ಲಿಸುವಂತೆ ಪೊಲೀಸರು ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಆದರೆ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರು, ಉದ್ಯೋಗಾಕಾಂಕ್ಷಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು, ನ್ಯಾಯ ಸಿಗುವರೆಗೆ ಹೋರಾಟ ನಿಲಿಸಲ್ಲ ಎಂದಿದ್ದಾರೆ. ಸರ್ಕಾರದ ವಿರುದ್ಧ, ಆಯೋಗದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಪೊಲೀಸರು ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ರಸ್ತೆಯಲ್ಲಿ ಎಳೆದಾಡಿ ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಈ ವೇಳೆ ಹಲವು ವಿದ್ಯಾರ್ಥಿನಿಯರು, ಪ್ರತಿಭಟನಾಕಾರರು ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಮಹಿಳಾ ಪೊಲೀಸರನ್ನು ಬಳಸದೇ ಇತರ ಪೊಲೀಸರೇ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ದರ್ಪ ಮೆರೆದು ಅಮಾನವೀಯವಾಗಿ ಎಳೆದೊಯ್ದಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರ ವರ್ತನೆ ಪ್ರಶ್ನೆ ಮಾಡಿದ್ದ ಮಾಧ್ಯಮ ಸಿಬ್ಬಂದಿಗಳ ಮೇಲೂ ಪೊಲೀಸರು ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button