Kannada NewsKarnataka NewsNationalPolitics

*ಕೃಷ್ಣಾ ಜಲವಿವಾದ: ಕಾವೇರಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ : ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಚರ್ಚಿಸಲಾಯಿತು.

ಸಭೆಯಲ್ಲಿ ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ.

ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಸಿಎಂ ಹೇಳಿದರು.

ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗೆಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುವುದು.

Home add -Advt

ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ ಎಂದರು.

ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

Related Articles

Back to top button