ಇದೇನಾ ಮಹಿಳೆಯರ ಸಬಲೀಕರಣ? ಎಂದು ಪ್ರಶ್ನೆ
ಪ್ರಗತಿವಾಹಿನಿ ಸುದ್ದಿ : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ಮಾಡಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.
ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವನ್ನು ಉಲ್ಲೇಖಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕಳಪೆ ಔಷಧ ಪೂರೈಕೆ ವಿಷಯ ಸರ್ಕಾರದ ಗಮನಕ್ಕೆ ಬಂದಿರಲಿಲ್ಲವೇ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಈ ಮಾಹಿತಿ ಇರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ. ಸ್ವತಃ ದಿನೇಶ್ ಗುಂಡೂರಾವ್ ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ ಎಂದು ಹೇಳಿದ್ದಾರೆ.
ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಕೊಟ್ಟು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದೇವೆ ಎನ್ನುವ ರಾಜ್ಯ ಕಾಂಗ್ರೆಸ್ ಸರ್ಕಾರ, ಆಸ್ಪತ್ರೆಗಳಲ್ಲಿ ಅದೇ ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿದೆ. ಮಗುವಿಗೆ ಜನ್ಮ ನೀಡಲು ಸರ್ಕಾರ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ. ಇದೇನಾ ಮಹಿಳೆಯರ ಸಬಲೀಕರಣ? ಎಂದು ಹೆಚ್‌ಡಿಕೆ ಕಿಡಿ ಕಾರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ