*ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ -2023 ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.

ಮಣಿಪಾಲದ ಡಾ.ಟಿ.ಎಂ.ಎ.ಪೈ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸತ್ಕರಿಸಿದರು.

ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ಮಾಹೆ ಪ್ರೊ ಚಾನ್ಸೆಲರ್ ಡಾ. ಎಚ್ ಎಸ್. ಬಲ್ಲಾಳ್, ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ.ಅಕ್ಷಯ್ ಹಾಕೆ ಮಚೀಂದ್ರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ KUWJ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿವರ:
* ಸರ್ಕಾರ ಮಟ್ಟದಲ್ಲಿ ಪತ್ರಕರ್ತರ ಪರ ಕೆಲಸ- ಲಕ್ಷ್ಮಿ ಹೆಬ್ಬಾಳ್ಕರ್
* ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಚಿವರ ಹೇಳಿಕೆ
ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ,ಸಾಮರಸ್ಯ,ಸತ್ಯದ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿರುವ ಪತ್ರಕರ್ತರು ಕುಟುಂಬವನ್ನು ತ್ಯಜಿಸಿ ರಾತ್ರಿ-ಹಗಲೆನ್ನದೇ ದುಡಿಯುತ್ತಾರೆ. ಸಮಾಜದ ಒಳಿತಿಗಾಗಿ ಸದಾ ಚಿಂತಿಸುವ ಪತ್ರಕರ್ತರು ಅವರ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಬೇಕಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಆಡಿಟೋರಿಯಂನಲ್ಲಿ ಶನಿವಾರ ನಡೆದ ರಾಜ್ಯದ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸಂವಿಧಾನ ಪುಸ್ತಕವನ್ನು ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯನಿರತ ಪತ್ರಕರ್ತರ ಸಂಘ ಪತ್ರಕರ್ತರ ಮಕ್ಕಳಿಗಾಗಿ ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಾದರಿ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಸಮಾಜದ ಅನೇಕ ಸಮಸ್ಯೆಗಳನ್ನು ಬೆಳಕು ಚೆಲ್ಲುವ ಪತ್ರಕರ್ತರಿಗೂ ಸಾಕಷ್ಟು ಸಮಸ್ಯೆಗಳಿವೆ. ಈಗಲೂ ನಿವೇಶನಕ್ಕಾಗಿ ಪತ್ರಕರ್ತರು ಹೋರಾಡಬೇಕಾಗಿದೆ. ಪತ್ರಕರ್ತರ ಏಳಿಗೆಗಾಗಿ ಸರ್ಕಾರದ ಮಟ್ಟದಲ್ಲಿ ಮುಂದೆ ನಿಂತು ಕೆಲಸ ಮಾಡಿಸಿಕೊಡುತ್ತೇನೆ. ರಾತ್ರಿ-ಹಗಲು,ಚಳಿ-ಮಳೆ ಎನ್ನದೇ ಸುದ್ದಿ ಮಾಡುವ ಪತ್ರಕರ್ತರ ಶ್ರಮವನ್ನು ಕಣ್ಣಾರೆ ಕಂಡಿದ್ದೇನೆ.ಖಂಡಿತವಾಗಿಯೂ ನಿಮ್ಮೆಲ್ಲರ ಶ್ರಮಕ್ಕೆ ಫಲ ಸಿಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕರ್ತೆಯಾಗಿ ಆರಂಭಗೊಂಡ ನನ್ನ ರಾಜಕೀಯ ಜೀವನ ಇಂದು ಪ್ರತಿಭಾವಂತರ ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಇದು ನನ್ನ ಶ್ರಮಕ್ಕೆ ಸಿಕ್ಕ ಪ್ರತಿಫಲ.ತಂದೆ-ತಾಯಿ ಕಷ್ಟಪಟ್ಟು ತಮ್ಮ ಭವಿಷ್ಯದ ಬಗ್ಗೆ ಕನಸು ಕಂಡಿದ್ದಾರೆ.ಅವರ ಕನಸನ್ನು ನನಸು ಮಾಡುವ ಗುರುತರವಾದ ಜವಾಬ್ದಾರಿ ನಿಮ್ಮ ಮೇಲಿದೆ.ಅವರ ಕನಸನ್ನು ನನಸುಗೊಳಿಸಲು ನೀವೆಲ್ಲರೂ ಸನ್ನದ್ದರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕರ್ನಾಟಕ ವಿಧಾಸಭಾ ಸಭಾಪತಿ ಯು.ಟಿ ಖಾದರ್ ಮಾತನಾಡಿ, ನಮ್ಮ ಸಂಪ್ರದಾಯ,ಆಚಾರ-ವಿಚಾರಗಳು ಪಾರಂಪರಿಕವಾಗಿ ಬೆಳೆದು ನಿಲ್ಲಬೇಕಾದರೆ ಅದಕ್ಕೆ ಪತ್ರಕರ್ತರ ಕೊಡುಗೆ ಅಪಾರವಾದುದು.ಯುವ ಪೀಳಿಗೆಗೆ ನಮ್ಮ ಸಂಪ್ರದಾಯಗಳನ್ನು ವರ್ಗಾಯಿಸುವ ದೊಡ್ಡ ಶಕ್ತಿಯಾಗಿ ಮಾಧ್ಯಮದ ಪಾಲು ಬಹಳಷ್ಟಿವೆ ಎಂದರು.
ಈ ಸಂದರ್ಭದಲ್ಲಿ ಸಂಘದ ಸದಸ್ಯ ಪತ್ರಕರ್ತರ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಣಿಪಾಲ ಮಾಹೆ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಜಿಲ್ಲಾಧಿಕಾರಿ ಎಂ.ಕೂರ್ಮರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಮಚ್ಚಿಂದ್ರ ಹಾಕೆ ಮುಖ್ಯ ಅತಿಥಿಗಳಾಗಿದ್ದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಸ್ವಾಗತಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯ ದರ್ಶಿ ಜೆ.ಸಿ.ಲೋಕೇಶ್ ಪುರಸ್ಕೃತರ ಪಟ್ಟಿ ವಾಚಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ದಾನಿಗಳ ಪಟ್ಟಿ ವಾಚಿಸಿದರು. ಪತ್ರಕರ್ತ ಕೆ.ಸಿ.ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಕಲಾಮಯಂ ತಂಡದಿಂದ ಜಾನಪದ ಕಾರ್ಯಕ್ರಮ ನಡೆಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ