*ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆ: ಸಚಿವ ಎನ್ ಎಸ್ ಭೋಸರಾಜು*
ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಿ
ಪ್ರಗತಿವಾಹಿನಿ ಸುದ್ದಿ: ಸುಮಾರು 40 ಸಾವಿರ ಜಲಮೂಲಗಳ ವ್ಯಾಪ್ತಿಯನ್ನು ಹೊಂದಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆಯನ್ನು ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು. ಈ ಹಿನ್ನಲೆಯಲ್ಲಿ ಇಂದು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಜಲಮೂಲಗಳ ಸಂರಕ್ಷಣೆ ಹಾಗೂ ಆದಾಯ ವೃದ್ದಿಗೆ ಇಲಾಖವಾರು ಸಮನ್ವಯಕ್ಕೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಿ:
ರಾಜ್ಯದಲ್ಲಿ ಸುಮಾರು 40 ಸಾವಿರ ಜಲಮೂಲಗಳಿವೆ. ಇವುಗಳ ಸಂರಕ್ಷಣೆ ಮತ್ತು ಸಮರ್ಪಕ ನಿರ್ವಹಣೆಯಿಂದ ಅಂತರ್ಜಲವೃದ್ದಿಯಾಗಲಿದೆ. ಈ ನಿಟ್ಟಿನಲ್ಲಿ ಇಲಾಖೆಗಳ ಮಧ್ಯೆ ಸಮನ್ವಯ ಬಹಳ ಮುಖ್ಯ. ಈ ಜಲಮೂಲಗಳ ನಿರ್ವಹಣೆಗೆ ಹಣಕಾಸಿನ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೀನುಗಾರಿಕೆ, ಪ್ಲೋಟಿಂಗ್ ಸೋಲಾರ್, ಬೋಟಿಂಗ್ ನಂತಹ ಆದಾಯ ಮೂಲಗಳನ್ನು ಗುರುತಿಸಬೇಕು ಎಂದು ಸೂಚನೆ ನೀಡಿದರು.
ಸಿಎಂ ಅಧ್ಯಕ್ಷತೆಯಲ್ಲಿ ಸಭೆ:
ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ರಾಜ್ಯದ ಜಲಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ದಿಯ ನಿಟ್ಟಿನಲ್ಲಿ ಹಲವಾರು ವಿಷಯಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಮಂಡಿಸಬೇಕಾದ ವಿಷಯಗಳ ಬಗ್ಗೆ ಅಗತ್ಯ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಕಳೆದ ಆಯವ್ಯಯದಲ್ಲಿ ಘೋಷಿಸಿರುವಂತೆ ಕೆರೆ ಬಳಕೆದಾರರ ಸಂಘಗಳನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿಗಳಾದ ರಾಘವನ್, ಆರ್ಥಿಕ ಇಲಾಖೆ ಅಧಿಕಾರಿಗಳು, ಕಾನೂನು ಇಲಾಖೆ ಅಧಿಕಾರಿಗಳು, ಸಹಕಾರ ಇಲಾಖೆ ಅಧಿಕಾರಿಗಳು, ನಗರ ಯೋಜನೆ ಹಾಗೂ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತಿರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ