Kannada NewsLatestPolitics

*ಪಾಲಿಕೆ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಆರಂಭಕ್ಕೆ ಗಡುವು*

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಂದ ಪ್ರಗತಿ ಪರಿಶೀಲನೆ

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಕೆರೆಗಳು ಮತ್ತು ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ನವೆಂಬರ್ ಮಾಸಾಂತ್ಯದ ವೇಳೆಗೆ ಟೆಂಡರ್ ಕರೆಯಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಪಾಲಿಕೆಗಳ ಮುಖ್ಯಸ್ಥರಿಗೆ ಗಡುವು ವಿಧಿಸಿದ್ದಾರೆ.


ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಮಂಗಳವಾರ ಎಲ್ಲಾ 12 ಮಹಾನಗರ ಪಾಲಿಕೆಗಳ ಆಯುಕ್ತರ ಸಭೆಯಲ್ಲಿ ಅಮೃತ್ 2.0 ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.


ಸಭೆಯ ನಂತರ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ(3 ಉದ್ಯಾನಗಳು ಮತ್ತು 6 ಜಲಮೂಲಗಳು), ತುಮಕೂರು(9 ಮತ್ತು 4), ದಾವಣಗೆರೆ(7 ಮತ್ತು 2), ವಿಜಯಪುರ(10 ಮತ್ತು 2), ಮೈಸೂರು(5 ಮತ್ತು 4), ಮಂಗಳೂರು(2 ಮತ್ತು 3), ಬಳ್ಳಾರಿ (6 ಮತ್ತು 5), ಕಲಬುರಗಿ(5 ಮತ್ತು 3), ಶಿವಮೊಗ್ಗ(3 ಮತ್ತು 5), ಬೆಳಗಾವಿ(7 ಮತ್ತು 7), ಬೀದರ್(19 ಮತ್ತು 8) ಮತ್ತು ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1 ಉದ್ಯಾನ ಮತ್ತು 1 ಕೆರೆಯನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಮಹಾನಗರಪಾಲಿಕೆಗಳಲ್ಲಿ ಕೆಲವು ಕೆರೆ ಅಭಿವೃದ್ಧಿ ಮತ್ತು ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸಮಗ್ರ ಯೋಜನಾ ವರದಿಯನ್ನು ಸಲ್ಲಿಸಲಾಗಿದೆ. ಇನ್ನೂ ಸಾಕಷ್ಟು ಕೆರೆಗಳ ಯೋಜನಾ ವರದಿಯನ್ನು ಸಿದ್ಧಪಡಿಸಿಲ್ಲ. ಈ ಸಮಗ್ರ ಯೋಜನಾ ವರದಿ ಸಿದ್ಧಪಡಿಸುವಲ್ಲಿ ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟಿಸ್ ನೀಡಿ ಅವರನ್ನು ಗುತ್ತಿಗೆದಾರರ ಪಟ್ಟಿಯಿಂದ ಹೊರಗಿಡುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದರು.

Home add -Advt


ಈಗಾಗಲೇ ಸಮಗ್ರ ಯೋಜನಾ ವರದಿ ಪೂರ್ಣಗೊಂಡಿರುವ ಕಡೆಗಳಲ್ಲಿ ಕೂಡಲೇ ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಹೇಳಿದರು.


ನಿಗದಿತ ಸಮಯದೊಳಗೆ ಕಾಮಗಾರಿಯನ್ನು ನಡೆಸದ ಗುತ್ತಿಗೆದಾರರಿಗೆ ದಂಡ ವಿಧಿಸುವುದರೊಂದಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದೂ ಸಚಿವರು ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.


ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಪೌರಾಡಳಿತ ಇಲಾಖೆ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ ಸೇರಿದಂತೆ ಎಲ್ಲಾ 12 ಮಹಾನಗರ ಪಾಲಿಕೆಗಳ ಆಯುಕ್ತರು ಮತ್ತು ಉನ್ನತಾಧಿಕಾರಿಗಳು ಹಾಜರಿದ್ದರು.

Related Articles

Back to top button