
ಪ್ರಗತಿವಾಹಿನಿ ಸುದ್ದಿ: ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಡುಹಕ್ಕಿ ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಾಡುಗಾರಿಕೆ ಜೊತೆಗೆ ಮದ್ಯಪಾನ ವಿರೋಧಿ ಹೋರಾಟ ಸೇರಿದಂತೆ ಅನೇಕ ಜನಪರ ಹೋರಾಟಗಳಲ್ಲಿ ಸುಕ್ರಿ ಬೊಮ್ಮಗೌಡ ಸಕ್ರಿಯವಾಗಿದ್ದರು. ಸುಕ್ರಜ್ಜಿ ಅಂತಾನೇ ಪ್ರಸಿದ್ಧಿ ಪಡೆದಿದ್ದ ಸುಕ್ರಿ ಬೊಮ್ಮಗೌಡ ಅವರ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಯಿತು ಎಂದು ಸಚಿವರು ತಿಳಿಸಿದ್ದಾರೆ.
ಸುಕ್ರಿ ಬೊಮ್ಮಗೌಡ ಅವರು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಈ ಪೈಕಿ ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕರ್ನಾಟಕ ಸರ್ಕಾರದಿಂದ “ಜಾನಪದ ಶ್ರೀ ಪ್ರಶಸ್ತಿ”, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಗೌರವ, ಆಳ್ವಾಸ್ ನುಡಿಸಿರಿ ಪ್ರಮುಖವಾದವು. ಅವರ ಹಾಡುಗಾರಿಕೆಯನ್ನು ಗುರುತಿಸಿದ್ದ ನೂರಾರು ಸಂಘ ಸಂಸ್ಥೆಗಳು ಗೌರವಿಸಿದ್ದವು.
ಮೃತರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಆ ದೇವರು ಕರುಣಿಸಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
					
				
					
					
					
					
					
					
					